ನೆರೆಯ ಆಂಧ್ರ, ತಮಿಳುನಾಡು, ತೆಲಂಗಾಣಗಳಿಗೆ ಹೋಲಿಸಿದರೆ ಬೆಂಗಳೂರು ಹಾಗೂ ಕರ್ನಾಟಕದ ಇತರೆ ಭಾಗಗಳಲ್ಲಿ ಟಿಕೆಟ್ ದರ ತುಸು ಹೆಚ್ಚಿದೆ. ಪರಭಾಷೆಯ ಸಿನಿಮಾಗಳು ರಾಜ್ಯದಲ್ಲಿ ಬಿಡುಗಡೆ ಆದಾಗ ಟಿಕೆಟ್ ದರಗಳು ಕೆಲವೊಮ್ಮೆ ಮೂರು ಪಟ್ಟು ಹೆಚ್ಚು ಮಾಡಿ ಮಾರಾಟ ಮಾಡಲಾಗುತ್ತದೆ.ಇದಕ್ಕೆ ಪ್ರೇಕ್ಷಕರಿಂದ ತೀವ್ರ ಒತ್ತಡ ಕೇಳೀ ಬಂದಿತ್ತು. ಪರಭಾಷೆ ಸಿನಿಮಾ ಟಿಕೆಟ್ ದರಗಳ ನಿಯಂತ್ರಣದ ಬಗ್ಗೆ ಕಳೆದ ಕೆಲ ತಿಂಗಳಿನಿಂದಲೂ ಕೂಗು ಕೇಳಿ ಬರುತ್ತಲೇ ಇತ್ತು. ಇದೀಗ ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಪಕ್ಕದ ರಾಜ್ಯಗಳಲ್ಲಿ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲನೆ ಮಾಡಿ ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ಟಿಕೆಟ್ ದರಗಳನ್ನು ನಿಯಂತ್ರಣಕ್ಕೆ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ’ ಎಂದಿದ್ದಾರೆ.
ಕನ್ನಡ ಸಿನಿಮಾಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ‘200 ಆಸನಗಳ ಮಿನಿ ಚಿತ್ರಮಂದಿರಗಳನ್ನು ರಾಜ್ಯದಾದ್ಯಂತ ಸ್ಥಾಪಿಸುವ ಯೋಜನೆ ಹೊಂದಿದ್ದು, ಅದರ ಅನುಷ್ಠಾನಕ್ಕೆ ಪ್ರಯತ್ನ ನಡೆಸಲಾಗುವುದು’ ಎಂದಿದ್ದಾರೆ.
ಇದೇ ವೇಳೆ ವರನಟ ಡಾ.ರಾಜ್ ಕುಮಾರ್ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ‘ರಾಜ್ಕುಮಾರ್ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೇ ಮಾದರಿ. ಡಾ ರಾಜ್ ಕುಮಾರ್ ಅವರಿಗೆ ರಾಜ್ ಅವರೇ ಸಾಟಿ. ಅವರಿಗೆ ಸಾಟಿ ಆಗುವವರು ಯಾರೂ ಇನ್ನೂ ಬಂದಿಲ್ಲ. ಡಾ.ರಾಜ್ ಗೋಕಾಕ್ ಚಳವಳಿಯಲ್ಲಿ ಭಾಗಿಯಾಗಿದ್ದಾಗ ನಾನೂ ಸಹ ಅವರ ಭಾಷಣ ಕೇಳಲು ಹೋಗಿದ್ದೆ. ರಾಜ್ ಅವರಿಂದಾಗಿ ಕನ್ನಡ ಹೆಚ್ಚು ಶಕ್ತಿಯುತವಾಗಿ ಬೆಳೆಯಿತು. ನಾನು ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದಾಗ ಸಾ.ರಾ.ಗೋವಿಂದು ಮತ್ತು ಹಿರಿಯ ಪತ್ರಕರ್ತ ವೆಂಕಟೇಶ್ ಅವರ ಪರಿಚಯ ಮೊದಲ ಬಾರಿ ಆಯಿತು. ಇವರ ಕನ್ನಡ ಪರ ಹೋರಾಟದ ಬಗ್ಗೆ ಆಗಲೇ ನನಗೆ ಅಭಿಮಾನ ಇತ್ತು. ನನಗೆ ಕನ್ನಡ ನಾಡು, ನೆಲ, ಭಾಷೆ, ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಇದೆ’ ಎಂದರು.