ಬೆಂಗಳೂರು:- ಮುಂದಿನ ಆರು ತಿಂಗಳಲ್ಲಿ ಪಿಎಸ್ಐ ಸೇರಿ ವಿವಿಧ ಹುದ್ದೆಗಳಿಗೆ 4547 ಮಂದಿ ನೇಮಕ ಮಾಡಲಾಗುತ್ತದೆ ಎಂದು ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನ್ಯಾಯಾಲಯದಿಂದ ಒಪ್ಪಿಗೆ ದೊರೆತ ಹಿನ್ನೆಲೆ 545 ಮಂದಿ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳನ್ನು ಡಿಸೆಂಬರ್ ಅಂತ್ಯದೊಳಗಾಗಿ ಭರ್ತಿ ಮಾಡಲಾಗುವುದು. ನಂತರ 402 ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳ ಹುದ್ದೆ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಬಳಿಕ 600 ಮಂದಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುವುದು ಎಂದ ಅವರು, ಒಟ್ಟಾರೆಯಾಗಿ 1547 ಪಿಎಸ್ಐ ಹುದ್ದೆಗಳನ್ನು ಮುಂದಿನ ಆರು ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದರು. ಇದೇ ರೀತಿ ಮೂರು ಸಾವಿರ ಕಾನ್ಸ್ಟೇಬಲ್ಗಳನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಆದಷ್ಟು ತ್ವರಿತವಾಗಿ ಪೂರ್ಣಗೊಳ್ಳಲಿದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.
ಪೊಲೀಸ್ ಇಲಾಖೆಗೆ ಇನ್ನೂ ಹದಿನೈದು ಸಾವಿರ ಕಾನ್ಸ್ಟೇಬಲ್ಗಳ ಅಗತ್ಯವಿದೆ. ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದ ಅವರು, ಆಯ್ಕೆಯಾಗುವವರಿಗೆ ತರಬೇತಿ ನೀಡುವ ಅಗತ್ಯ ಇರುವುದರಿಂದ ಒಂದೇ ಕಂತಿನಲ್ಲಿ ಇಷ್ಟು ಮಂದಿಯನ್ನು ನೇಮಕ ಮಾಡಿಕೊಳ್ಳುವುದು ಕಷ್ಟ ಎಂದು ಹೇಳಿದರು.
ಪ್ರತಿ ವರ್ಷ ನಿವೃತ್ತಿಯಾಗುವ ಪೊಲೀಸ್ ಸಿಬ್ಬಂದಿ ಜಾಗಕ್ಕೆ ಹೊಸ ನೇಮಕಾತಿ ಮಾಡಿಕೊಳ್ಳಲು ಈಗ ಹಣಕಾಸು ಇಲಾಖೆಯ ಒಪ್ಪಿಗೆ ಪಡೆಯಬೇಕು. ಆದರೆ, ನಿವೃತ್ತರ ಜಾಗಕ್ಕೆ ಹೊಸಬರನ್ನು ನೇಮಕ ಮಾಡಿಕೊಳ್ಳಲು ಹಣಕಾಸು ಇಲಾಖೆಯ ಒಪ್ಪಿಗೆ ಬೇಕಿಲ್ಲ ಎಂದು ಹೇಳಿದರು.