ಮುಂಬೈ: ಅಕ್ಟೋಬರ್ 5ರಿಂದ ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಈಗ ನಿರ್ಣಾಯಕ ಹಂತಕ್ಕೆ ಬಂದಿದ್ದು, ಸೆಮಿಫೈನಲ್ ಕದನದ ವಿವರವನ್ನು ಐಸಿಸಿ ಅಧಿಕೃತವಾಗಿ ಪ್ರಕಟಿಸಿದೆ.
ಆರಂಭದಿಂದ ಇಲ್ಲಿಯವರೆಗೂ ಒಂದು ಪಂದ್ಯವನ್ನು ಸೋಲದೆ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆಯುವಲ್ಲಿ ಪಾಕಿಸ್ತಾನ ವಿಫಲವಾಗಿದ್ದು, ಮನೆ ಕಡೆ ಹೋಗುವುದು ಖಚಿತವಾಗಿದೆ.
ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ 337 ರನ್ಗಳ ಬೃಹತ್ ಮೊತ್ತ ಪೇರಿಸಿದ್ದರಿಂದ ಪಾಕಿಸ್ತಾನ ಸೆಮಿಫೈನಲ್ ಪ್ರವೇಶವನ್ನು ತಪ್ಪಿಸಿಕೊಂಡಿತು. ಭಾರತ ಇಂದು ನೆದರ್ಲ್ಯಾಂಡ್ಸ್ ವಿರುದ್ಧ ಸೆಣಸಲಿದೆ. ಆದಾಗ್ಯೂ, ಈ ಪಂದ್ಯ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿರುವ ಭಾರತದ ಮೇಲೆ ಯಾವುದೇ ಪರಿಣಾಮ ಬೀರಲ್ಲ.
ನವೆಂಬರ್ 15ರಂದು ಮುಂಬೈಯಲ್ಲಿ ಭಾರತ Vs ನ್ಯೂಜಿಲೆಂಡ್ ವಿರುದ್ಧ ಮೊದಲ ಸೆಮಿಫೈನಲ್ ಪಂದ್ಯ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ನವೆಂಬರ್ 16 ರಂದು ಕೋಲ್ಕತ್ತಾದಲ್ಲಿ ದಕ್ಷಿಣ ಆಫ್ರಿಕಾ Vs ಆಸ್ಟ್ರೇಲಿಯಾ ನಡುವೆ ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದೆ.