ಬೆಂಗಳೂರು:- ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಜನತಾ ದರ್ಶನ ನಡೆಸಲಿದ್ದಾರೆ. ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಈ ಜನತಾ ದರ್ಶನ ನಡೆಸಲಿದ್ದಾರೆ.
ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರ್ಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ, ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಿದ್ದಾರೆ.
ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಸುತ್ತೋಲೆ ಹೊರಡಿಸಿ, ಸರ್ಕಾರದ ಎಲ್ಲ ಕಾರ್ಯದರ್ಶಿಗಳು / ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ/ ಉಪವಿಭಾಗ/ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ.
ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ತರುವಂತೆ ಕೋರಲಾಗಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಪತ್ತೆಹಚ್ಚಲು ಅನುಕೂಲವಾಗಲಿದೆ.