ಬೆಂಗಳೂರು:- ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಪರಿಣಾಮ ಡಿ. 7ರವರೆಗೆ ಕೂಡ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಚಂಡಮಾರುತ ಹೈ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ವಿಜ್ಞಾನಿ ಎ ಪ್ರಸಾದ್ ತಿಳಿಸಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಕಡಿಮೆ ಒತ್ತಡದ ಪ್ರದೇಶ ಕ್ರಮೇಣ ವಾಯುವ್ಯ ಕಡೆಗೆ ಚಲಿಸಲಿದೆ. ಇದು ಸೈಕ್ಲೋನಿಕ್ ಚಂಡಮಾರುತದ ರೂಪವನ್ನು ತೆಗೆದುಕೊಳ್ಳುತ್ತದೆ. ತಮಿಳುನಾಡು, ಕೇರಳ ಮತ್ತು ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ವಾರ ಮೋಡ ಕವಿದ ವಾತಾವರಣವಿತ್ತು. ಈ ವಾರ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಹೆಚ್ಚಾಗಿದೆ ಎಂದಿದ್ದಾರೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಸಾದ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮಳೆ ಮತ್ತೆ ಚುರುಕುಗೊಂಡಿದ್ದು, ರೈತರು ವ್ಯವಸಾಯದಲ್ಲಿ ಮತ್ತೆ ಸಕ್ರಿಯವಾಗುವಂತೆ ಮಾಡಿದೆ. ಆದರೆ ಈ ಬಾರಿ ಮಳೆ ಯಾವಾಗ ಬರುತ್ತದೆ? ಯಾವಾಗ ಹಠಾತ್ತನೆ ನಿಲ್ಲುತ್ತದೆ ಎಂದು ಹೇಳುವುದು ಕಷ್ಟವಾಗಿದೆ ಎಂದು ಹಲವು ಹವಾಮಾನ ತಜ್ಞರು ತಿಳಿಸಿದ್ದಾರೆ.