ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu Kashmir) ಸಂವಿಧಾನದ 370ನೇ ವಿಧಿಯ (Article 370) ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು (Special Status) ರದ್ದು ಪಡಿಸಿದ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ 2024ರ ಸೆಪ್ಟೆಂಬರ್ 30ರ ಒಳಗಡೆ ಒಳಗಡೆ ವಿಧಾನಸಭಾ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠದಿಂದ ಸರ್ವಾನುಮತದ ತೀರ್ಪು ಪ್ರಕಟವಾಗಿದೆ.
ತೀರ್ಪು ಓದಿದ ಸಿಜೆಐ ಚಂದ್ರಚೂಡ್ ಅವರು, ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ ತಾತ್ಕಾಲಿಕ. ಭಾರತದ ಸಂವಿಧಾನದ 1 ಮತ್ತು 370 ನೇ ವಿಧಿಗಳಿಂದ ಸ್ಪಷ್ಟವಾದಂತೆ ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ರಾಜ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಆರ್ಟಿಕಲ್ 370 ವಿಧಿಸಿದ್ದು ಮಧ್ಯಂತರ ವ್ಯವಸ್ಥೆಯಾಗಿದೆ. ರಾಷ್ಟ್ರಪತಿಗಳು ರದ್ದು ಪಡಿಸಿದ ಆದೇಶ ಸರಿಯಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಬಾಡಿಗೆ ಬೈಕ್’ನಲ್ಲಿ 330km ಪ್ರಯಾಣಿಸಿ ವಿಧಾನಸಭೆಗೆ ತೆರಳಿದ ಜನಪ್ರತಿನಿಧಿ!
2019ರ ಆಗಸ್ಟ್ 6 ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ನಲ್ಲಿ ಆರಂಭವಾದ 16 ದಿನಗಳ ಮ್ಯಾರಥಾನ್ ವಿಚಾರಣೆಯ ಬಳಿಕ ಪೀಠವು ಸೆಪ್ಟೆಂಬರ್ 5 ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಆರ್ಟಿಕಲ್ 370, ಆರ್ಟಿಕಲ್ 35A ಭಾರತದ ಸಂವಿಧಾನದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿತ್ತು. ಇದು ಪ್ರತ್ಯೇಕ ಸಂವಿಧಾನ ಮತ್ತು ಇತರ ಕಾನೂನು ವ್ಯತ್ಯಾಸಗಳ ನಡುವೆ ಪ್ರತ್ಯೇಕ ದಂಡ ಸಂಹಿತೆಯನ್ನು ಹೊಂದಲು ಅನುವು ಮಾಡಿಕೊಡುತ್ತದೆ.
ಇದನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದು ಕಾನೂನು ಉಲ್ಲಂಘನೆ ಎಂದು ಅರ್ಜಿದಾರರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ನಾಯಕರು ಸೇರಿದ್ದಾರೆ. ವಿಚಾರಣೆಯ ವೇಳೆ, ಕೇಂದ್ರವು ತನ್ನ ಲಾಭಕ್ಕಾಗಿ ಎಲ್ಲವನ್ನೂ ಮಾಡುತ್ತಿದೆ ಮತ್ತು ನೆಲದ ನಿಯಮಕ್ಕೆ ಬದ್ಧವಾಗಿಲ್ಲ ಎಂದು ಅರ್ಜಿದಾರರು ಆರೋಪಿಸಿದರು. ಸುಪ್ರೀಂಕೋರ್ಟ್ ಆದೇಶದ ಹಿನ್ನಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ.