ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ 3 ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಡಕ್ವರ್ತ್ ಲೂಯಿಸ್ ನಿಯಮದನ್ವಯ 5 ವಿಕೆಟ್ಗಳ ಸೋಲುಂಡಿತು. ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟ ಮಾಡಿರುವ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಮತ್ತಷ್ಟು ಬಲಪಡಿಸಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ಎದುರು ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 56 ರನ್ ಸಿಡಿಸಿ ಅಬ್ಬರಿಸಿದ್ದರು. ಇದರೊಂದಿಗೆ ತಮ್ಮ ಟಿ20-ಐ ಬ್ಯಾಟಿಂಗ್ ಶ್ರೇಯಾಂಕದ ರೇಟಿಂಗ್ಸ್ನ 865ಕ್ಕೆ ವಿಸ್ತರಿಸಿಕೊಂಡಿದ್ದಾರೆ. ಟಿ20-ಐ ಬ್ಯಾಟರ್ಗಳ ಪಟ್ಟಿಯಲ್ಲಿ ಪಾಕಿಸ್ತಾನ ತಂಡದ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಮೊಹಮ್ಮದ್ ರಿಝ್ವಾನ್ (787 ರೇಟಿಂಗ್ಸ್) ಎರಡನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ಹಂಗಾಮಿ ನಾಯಕ ಏಡೆನ್ ಮಾರ್ಕ್ರಮ್ (758 ರೇಟಿಂಗ್ಸ್) ಮೂರನೇ ಸ್ಥಾನದಲ್ಲಿದ್ದಾರೆ.
ಭಾರತ ತಂಡದಲ್ಲಿ ನಿಧಾನವಾಗಿ ತಮ್ಮ ಸ್ಥಾನ ಬಲ ಪಡಿಸಿಕೊಳ್ಳುತ್ತಿರುವ ಪ್ರತಿಭಾನ್ವಿತ ಯುವ ಬ್ಯಾಟರ್ ರಿಂಕು ಸಿಂಗ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ತಮ್ಮ ಶ್ರೇಷ್ಠ ಸಾಧನೆ ಮೆರೆದಿದ್ದಾರೆ. ದಕ್ಷಿಣ ಆಫ್ರಿಕಾ ಎದುರು 2ನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಪರ ಆಪಯತ್ಬಾಂಧವನಾಗಿ ನಿಂತ ರಿಂಕು ಸಿಂಗ್ 39 ಎಸೆತಗಳಲ್ಲಿ 9 ಫೋರ್ ಮತ್ತು 2 ಸಿಕ್ಸರ್ಗಳೊಂದಿಗೆ 68 ರನ್ ಸಿಡಿಸಿದರು. ಪರಿಣಾಮ ಶ್ರೇಯಾಂಕ ಪಟ್ಟಿಯಲ್ಲಿ ಬರೋಬ್ಬರಿ 46 ಸ್ಥಾನಗಳನ್ನು ಜಿಗಿದು 59ನೇ ಶ್ರೇಯಾಂಕ ಪಡೆದಿದ್ದಾರೆ.
ರಿಂಕು ಸಿಂಗ್ ಟೀಮ್ ಇಂಡಿಯಾದಲ್ಲಿ ಫಿನಿಷರ್ ಕೆಲಸವನ್ನು ಅದ್ಭುತವಾಗಿ ನಿಭಾಯಿಸಿದ್ದಾರೆ. ರಿಂಕು ಆಗಮನದಿಂದ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ಗೆ ಆನೆ ಬಲ ಬಂದಂತ್ತಾಗಿದೆ. ಈಗಾಗಲೇ ಭಾರತ ಟಿ20 ತಂಡದಲ್ಲಿ ತಮ್ಮ ಸ್ಥಾನವನ್ನು ಬಲಪಡಿಸಿಕೊಂಡಿದ್ದು, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗುವ ಭರವಸೆ ಹೆಚ್ಚಿಸಿಕೊಂಡಿದ್ದಾರೆ.