ಬೆಂಗಳೂರು:- ರಾಜ್ಯದಲ್ಲಿ ಸೋಂಕು ಹರಡದಂತೆ ತಡೆಯಲು ಆರೋಗ್ಯ ಇಲಾಖೆ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ಇಂದು ಕೋವಿಡ್ ಮಾರ್ಗಸೂಚಿ ಹೊರಬೀಳುವ ಸಾಧ್ಯತೆ ಇದೆ.
ಕ್ರಿಸ್ ಮಸ್ ಹಬ್ಬ ಹಾಗೂ ಹೊಸ ವರ್ಷ ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಒಂದು ವಾರಗಳ ಪ್ರಕರಣಗಳನ್ನು ಆಧರಿಸಿ ಹಬ್ಬ ಹಾಗೂ ವರ್ಷಾಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಬೀಳಲಿದೆ.
ಭಾರತದಲ್ಲಿ ಕರೊನಾ ವೈರಸ್ ಪ್ರಕರಣ ಮತ್ತೆ ಹೆಚ್ಚಾಗತೊಡಗಿದ್ದು, ಭಾನುವಾರ 335 ಹೊಸ ಪ್ರಕರಣಗಳು ಪತ್ತೆಯಾಗಿದೆ. ಸೋಂಕಿಗೆ ಕೇರಳದಲ್ಲಿ ನಾಲ್ವರು, ಉತ್ತರಪ್ರದೇಶದಲ್ಲಿ ಒಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,701ಕ್ಕೆ ಏರಿಕೆ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕೇರಳದಲ್ಲಿ ಪ್ರಸ್ತುತ 1,324 ಕೋವಿಡ್-19 ಸಕ್ರಿಯ ಪ್ರಕರಣಗಳಿವೆ ಎಂಬುದು ಕಳವಳಕಾರಿ ವಿಷಯವಾಗಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದೊಂದು ವಾರದಲ್ಲಿ 81 ಸೋಂಕು ಪ್ರಕರಣಗಳು ದೃಢಪಟ್ಟಿವೆ. ಡಿ.12 ರಿಂದ 18ವರೆಗೆ ಕೋವಿಡ್ ಸೋಂಕು ಲಕ್ಷಣ ಹೊಂದಿರುವ 2,619 ಶಂಕಿತರ ಸ್ವಾಯಬ್ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 81 ಜನ ಸೋಂಕಿಗೆ ಒಳಗಾಗಿದ್ದಾರೆ.
ಕೇರಳ ರಾಜ್ಯದಲ್ಲಿ ಕರೊನಾ ಹೊಸ ರೂಪ ಜೆಎನ್1 ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಮುಂಜಾಗ್ರತೆಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ ಇರುವವರು ಆರೋಗ್ಯದ ದೃಷ್ಟಿಯಿಂದ ಕಡ್ಡಾಯವಾಗಿ ಮಾಸ್ಕ್ ಧರಿಸಿದರೆ ಒಳ್ಳೆಯದು. ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ತಪಾಸಣೆಗೆ ಒಳಗಾಗಬೇಕು. ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.