ನವದೆಹಲಿ:- ಬರ ಪರಿಹಾರ ಅಮಿತ್ ಷಾ ಜತೆ ಚರ್ಚೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯಗೆ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಬರ ಪರಿಹಾರ ಮನವಿಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಜತೆ ಮಾತುಕತೆ ನಡೆಸಿ, ಸೂಕ್ತ ಕ್ರಮಕ್ಕೆ ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಸಂಸತ್ ಭವನದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರೊಂದಿಗೆ ಪ್ರಧಾನಿಯನ್ನು ಸಿದ್ದರಾಮಯ್ಯ ಭೇಟಿ ಮಾಡಿ, ರಾಜ್ಯದ ಬರ ಪರಿಸ್ಥಿತಿ ಮತ್ತು ಪರಿಹಾರ ಕೋರಿ ಸಲ್ಲಿಸಲಾಗಿರುವ ಮನವಿ ಬಗ್ಗೆ ಗಮನಸೆಳೆದಾಗ ಪಿಎಂ ಈ ಪ್ರತಿಕ್ರಿಯೆ ನೀಡಿದ್ದಾರೆ.
ಬುಧವಾರ ಬೆಳಗ್ಗೆ ಅಮಿತ್ ಷಾ ಭೇಟಿಗೂ ಸಮಯ ಸಿಕ್ಕಿದ್ದು, ಬರ ಪರಿಹಾರದ ಬಗ್ಗೆ ಶೀಘ್ರ ಕ್ರಮ ಕೈಗೊಂಡು, ಹಣ ಬಿಡುಗಡೆಗೆ ಸಿಎಂ ಒತ್ತಾಯಿಸಲಿದ್ದಾರೆ.
ಪ್ರಧಾನಿ ಭೇಟಿ ಬಳಿಕ ಸುದ್ದಿಗಾರರ ಜತೆ ಮಾಹಿತಿ ಹಂಚಿಕೊಂಡ ಸಿದ್ದರಾಮಯ್ಯ, ಅಮಿತ್ ಷಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಅವರಿಗೆ ಒತ್ತಾಯಿಸಿದ್ದೇವೆ. ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಹೈ ಪವರ್ ಕಮಿಟಿ ಸಭೆ ನಡೆಯಬೇಕು. ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಪರಿಹಾರ ಬಿಡುಗಡೆಗೆ ಸೂಚಿಸಬೇಕು ಎಂದು ಪಿಎಂಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಮುಖ್ಯವಾಗಿ ಐದು ಒತ್ತಾಯಗಳನ್ನು ಮುಂದಿಟ್ಟಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿ ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನೂ ನಿರೀಕ್ಷಿಸಿದ್ದೇವೆ ಎಂದರು. ಬರ ಪರಿಸ್ಥಿತಿಯಲ್ಲಿ ನರೇಗಾ ಕೆಲಸವನ್ನು 100ರಿಂದ 150 ದಿನಗಳಿಗೆ ಕಡ್ಡಾಯವಾಗಿ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿದೆ. ಈ ಬಗ್ಗೆ 3 ತಿಂಗಳ ಹಿಂದೆಯೇ ಕೇಂದ್ರಕ್ಕೆ ಮನವಿ ಕೊಟ್ಟಿದ್ದು, ತುರ್ತಾಗಿ ತೀರ್ಮಾನ ತೆಗೆದುಕೊಳ್ಳುವಂತೆಯೂ ಒತ್ತಾಯಿಸಿದ್ದೇವೆ ಎಂದು ಹೇಳಿದರು.