ಬೆಂಗಳೂರು:- ಕೇಂದ್ರ ಸರ್ಕಾರವೇ ಕನ್ನಡಿಗರ ತಲೆಮೇಲೆ ಕಲ್ಲು ಹಾಕ್ತಿದೆ ಎಂದು ಹೇಳುವ ಮೂಲಕ ಅಶೋಕ್ಗೆ ಸಿಎಂ ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯ ಸರ್ಕಾರ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಿದೆ ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಹೇಳಿದ್ದಾರೆ. ಆದರೆ, ಯಾರೋ ಬಿಜೆಪಿ ವಿರೋಧಿಗಳು ಈ ರೀತಿಯ ಹೇಳಿಕೆಯನ್ನು ಅವರ ಬಾಯಿಯಿಂದ ಹೇಳಿಸಿದಂತೆ ಕಾಣುತ್ತಿದೆ. ಅಶೋಕ್ ಅವರೇ, ಯಾಕೆ ನಮ್ಮ ಕೈಗೆ ಬಡಿಗೆ ಕೊಟ್ಟು ಬಡಿಸಿಕೊಳ್ಳೀರಿ? ನರೇಂದ್ರ ಮೋದಿ ಅವರ ನೇತೃತ್ವದ ಕಳೆದ ಒಂಬತ್ತು ವರ್ಷಗಳ ಆಡಳಿತದ ಜಾತಕ ಬಿಡಿಸಿಟ್ಟರೆ ಯಾರು ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಿದ್ದಾರೆ ಎಂದು ನಿಮಗೂ ಅರಿವಾಗಬಹುದು ಎಂದು ಸಿಎಂ ಸಿದ್ದಾರಾಮಯ್ಯ ತಿರುಗೇಟು ನೀಡಿದ್ದಾರೆ.
ನಾಡಿಗೆ ಬರಗಾಲ ಬಿದ್ದು ಆರು ತಿಂಗಳುಗಳಾಗಿವೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂಪಾಯಿ ನೀಡಲು ಮೂರು ತಿಂಗಳುಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ. ಪತ್ರ ಬರೆದಿದ್ದೇವೆ, ನಾನೇ ಖುದ್ದಾಗಿ ಹೋಗಿ ಪ್ರಧಾನಿ ಮತ್ತು ಗೃಹಸಚಿವರನ್ನು ಭೇಟಿಯಾಗಿ ನಮ್ಮ ರೈತರ ಕಷ್ಟಗಳನ್ನು ವಿವರಿಸಿದ್ದೇನೆ. ಕಂದಾಯ ಮತ್ತು ಕೃಷಿ ಸಚಿವರು ಕೂಡ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಬಂದಿದ್ದಾರೆ. ಡಿಸಿಎಂ ಅವರು ಗೃಹ ಸಚಿವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಅದರೆ, ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ. ನಮಗೆ ಅನ್ನ ನೀಡುವ ರೈತರು ಕನ್ನಡಿಗರಲ್ಲವೇ? ಅವರ ತಲೆ ಮೇಲೆ ಕಲ್ಲು ಹಾಕುತ್ತಿರುವವರು ಯಾರು ಎಂದು ಪ್ರಶ್ನಿಸಿದ್ದಾರೆ.
ತೆರಿಗೆ ಪಾವತಿಯಲ್ಲಿ ಕನ್ನಡಿಗರು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದಾರೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದ ನ್ಯಾಯಯುತ ಪಾಲನ್ನೂ ಕೊಡದೆ ವಂಚಿಸುತ್ತಿದೆ. ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನ ವರ್ಷದಿಂದ ವರ್ಷಕ್ಕೆ ಇಳಿಕೆಯ ಹಾದಿಯಲ್ಲಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂಪಾಯಿ ಇದ್ದ ಅನುದಾನ, 2022-23ರಲ್ಲಿ 13 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ. ಕನ್ನಡಿಗರ ತಲೆ ಕಲ್ಲು ಹಾಕುತ್ತಿರುವವರು ಯಾರು ಅಶೋಕ್ ಅವರೇ ಎಂದು ಕೇಳಿದ್ದಾರೆ.
ಯುಪಿಎ ಸರ್ಕಾರದ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ನಿಗದಿಪಡಿಸಿದ್ದ ಶೇ.4.72 ತೆರಿಗೆ ಪಾಲನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ 15ನೇ ಹಣಕಾಸು ಆಯೋಗವು ಶೇ.3.64 ಕ್ಕೆ ಇಳಿಕೆ ಮಾಡಿ ಕನ್ನಡಿಗರನ್ನು ವಂಚಿಸಿದೆ. ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45,000 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಈಗ ಹೇಳಿ ಅಶೋಕ್ ಅವರೇ, ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಿರುವವರು ಯಾರು ಎಂದು ಟೀಕಿಸಿದ್ದಾರೆ.