ದೊಡ್ಡಬಳ್ಳಾಪುರ:- ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದಿಂದ ನೆರವು ನೀಡಲಾಗುತ್ತದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು,ಎಸ್.ಎಸ್ ಘಾಟಿ ಕ್ಷೇತ್ರದಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಅನ್ನದಾಸೋಹಕ್ಕೆ ಸ್ಥಳ ನಿಗದಿ, ಪಶು ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ತೂಬಗೆರೆ ಹೋಬಳಿಯಲ್ಲಿನ ರಸ್ತೆ ವ್ಯವಸ್ಥೆ, ಕುಡಿಯುವ ನೀರು, ಬಸ್ ವ್ಯವಸ್ಥೆ, ಹಕ್ಕು ಪತ್ರ ವಿತರಣೆ, ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಸಚಿವರು ಹೇಳಿದರು.
ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಹಳಷ್ಟು ಪ್ರಸಿದ್ದಿ ಪಡೆದಿದೆ. ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಎಲ್ಲಾ ರೀತಿಯ ನೆರವು ನೀಡಲಾಗುವುದು. ತೂಬಗೆರೆ ಹೋಬಳಿಯು ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಈ ಹೋಬಳಿಯನ್ನು ಕಡೆಗಣಿಸದೇ ಎಲ್ಲಾ ರೀತಿಯ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು. ಕುಂದು ಕೊರತೆ ಸಭೆ ನಂತರ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ವಿತರಣೆ, ಬಡವರಿಗೆ ನಿವೇಶನ ಹಂಚಿಕೆ, ಹಳ್ಳಿಗಳಲ್ಲಿ ರಸ್ತೆ ದುರಸ್ತಿ, ಸ್ಮಶಾನ ಭೂಮಿ ಕೋರಿಕೆ, ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಶೀಘ್ರ ಇತ್ಯರ್ಥ ಪಡಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.