ಹುಬ್ಬಳ್ಳಿ ಜ.8: ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಕಾಲಮಿತಿಯೊಳಗೆ ಜಾರಿಗೆ ತಂದಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಬಹಳ ಅನುಕೂಲವಾಗಿದೆ. ರೂ. 58 ಸಾವಿರ ಕೋಟಿ ಹಣವನ್ನು ಈ ಎಲ್ಲಾ ಯೋಜನೆಗಳಿಗೆ ವ್ಯಯಿಸಲಾಗುತ್ತಿದೆ. ನುಡಿದಂತೆ ನಡೆಯುತ್ತಿರುವ ಸರ್ಕಾರ ನಮ್ಮದು ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಹೇಳಿದರು.
ಇಂದು ನೇಕಾರ ನಗರದ ಹನ್ಫಿ ಟೌನ್ ನಲ್ಲಿ 2021-22ನೇ ಸಾಲಿನ 15ನೇ ಹಣಕಾಸಿನ ಯೋಜನೆಯಡಿ ರೂ.4.15 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ವೆಟ್ ವೆಲ್ ಹಾಗೂ ಒಳಚರಂಡಿ ಕಾಮಗಾರಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಅನ್ನಭಾಗ್ಯ, ಗೃಹ ಲಕ್ಷಿö್ಮÃ, ಗೃಹ ಜ್ಯೋತಿ, ಶಕ್ತಿ ಹಾಗೂ ಯುವ ನಿಧಿ ಯೋಜನೆಗಳು ಜನರಿಗೆ ತಲುಪಿವೆ. ಈ ಎಲ್ಲಾ ಯೋಜನೆಗಳಿಂದ ರಾಜ್ಯದ ಜನರಿಗೆ ಅನುಕೂಲಕರವಾದ ವಾತಾವರಣವನ್ನು ನಿರ್ಮಾಣ ಮಾಡಿಕೊಟ್ಟಿವೆ. ಬರಗಾಲವಿದ್ದರೂ ಸಹ ರಾಜ್ಯ ಸುಭದ್ರವಾಗಿದೆ ಎಂದರು.
ಶಾಸಕರಾದ ಪ್ರಸಾದ್ ಅಬ್ಬಯ್ಯ ಮಾತನಾಡಿ, ನನ್ನ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಕಂಕಣ ಬದ್ಧನಾಗಿದ್ದೇನೆ. ಕಳೆದ 10 ವರ್ಷಗಳಿಗೂ ಅಧಿಕ ಈ ಭಾಗದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಸಹ ಕ್ಷೇತ್ರದಲ್ಲಿ ಬದಲಾವಣೆ ತರಲು ಪಣ ತೊಟ್ಟಿದ್ದೇನೆ. ಯಾವುದೇ ಸಮಸ್ಯೆಗಳು ಉಲ್ಬಣವಾದರೂ, ಬಗೆಹರಿಸಲು ನಾನು ಸದಾ ಸಿದ್ಧನಿರುವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ವೀಣಾ ಭರದ್ವಾಡ್, ಪಾಲಿಕೆ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ, ಪಾಲಿಕೆ ಸದಸ್ಯರಾದ ಶಿವು ಮೆಣಸಿನಕಾಯಿ, ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.