ಬೆಂಗಳೂರು:- 48 ಗಂಟೆ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ವಿಧಾನಪರಿಷತ್ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ದಿನಕ್ಕೂ ಹಿಂದಿನ 48 ಗಂಟೆ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದ ಜಿಲ್ಲಾಧಿಕಾರಿಯ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಕೇವಲ ಮತ ಎಣಿಕೆ ಹಾಗೂ ಮತದಾನ ದಿನಕ್ಕೆ ಸೀಮಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದೆ.
ಮಧ್ಯಮಾರಾಟ ನಿಷೇಧ ಒಂದು ದಿನಕ್ಕೆ ಸೀಮಿತಗೊಳಿಸಿ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ಉಮೇಶ ಅಡಿಗ ಅವರಿದ್ದ ವಿಭಾಗೀಯ ಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದೆ.
ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತೀಮಾ ಹೊನ್ನಾಪುರ, ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 135(ಸಿ) ಪ್ರಕಾರ ಯಾವುದೇ ಚುನಾಚಣೆ ಘೋಷಣೆ ಆದರೂ, ಚುನಾವಣೆಗೂ ಮುನ್ನ 48 ಗಂಟೆಗಳ ಕಾಲ ಮದ್ಯಮಾರಾಟಕ್ಕೆ ನಿರ್ಬಂಧ ವಿಧಿಸಬೇಕು ಎಂದು ತಿಳಿಸಲಾಗಿದೆ. ಅದರಂತೆ ಸರ್ಕಾರ ವಿಧಾನ ಪರಿಷತ್ ಉಪಚುನಾವಣೆಗೆ ಮತದಾನದ ದಿನಕ್ಕೂ ಮುನ್ನ 48 ಗಂಟೆಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ವಿವರಿಸಿದರು. ಅಲ್ಲದೆ, ಏಕ ಸದಸ್ಯಪೀಠ ಮದ್ಯಮಾರಾಟವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಿರುವ ಆದೇಶ ಕಾನೂನಿಗೆ ವಿರುದ್ದವಾಗಿದೆ ಎಂದರು
ಜತೆಗೆ, ಮದ್ಯ ಮಾರಾಟ ಮಾಡುವುದು ಮೂಲಭೂತ ಹಕ್ಕು ಅಲ್ಲ. ಆದ್ದರಿಂದ ಈ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಜಿಲ್ಲಾಧಿಕಾರಿಗಳ ಆದೇಶವನ್ನು ಎತ್ತಿಹಿಡಿದಿದೆ.
ಅಲ್ಲದೆ, ಮತದಾನಕ್ಕೂ ಮುನ್ನ 48 ಗಂಟೆಗಳು ಹಾಗೂ ಮತ ಎಣಿಕೆ ದಿನದಲ್ಲಿ ಆಹಾರ ಪೂರೈಸಲು ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಿಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಪೀಠ ಇದೇ ವೇಳೆ ತಿಳಿಸಿದೆ.