ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಈ ಬಾರಿ ಲೋಕಸಭಾ ಚುನಾವಣೆಯ ಆಖಾಡಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿ ಸಖತ್ ವೈರಲ್ ಆಗಿತ್ತು. ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ವಿರುದ್ಧ ಧನಂಜಯ್ ಅವರನ್ನು ಕಾಂಗ್ರೆಸ್ ಕಣಕ್ಕೆ ಇಳಿಸಲಿದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಧನಂಜಯ್ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕಾಂಗ್ರೆಸ್ ಪಕ್ಷದಲ್ಲಿ ಆ ರೀತಿ ಯಾವುದೇ ಚರ್ಚೆ ಆಗಿಲ್ಲ. ನನಗೆ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಗಾಳಿ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ.
ಕರ್ನಾಟಕ ಸರಕಾರ ಧನಂಜಯ್ ಅವರನ್ನು ಲಿಡ್ಕರ್ ಸಂಸ್ಥೆಗೆ ರಾಯಭಾರಿಯನ್ನಾಗಿ ನೇಮಿಸಿಕೊಂಡಿದೆ. ಜೊತೆಗೆ ಧನಂಜಯ್ ನಿರ್ಮಾಣದ ಡೇರ್ ಡೆವಿಲ್ ಮುಸ್ತಾಫಾಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶಂಸೆ ವ್ಯಕ್ತ ಪಡಿಸಿದ್ದರು. ಅಲ್ಲದೇ, ಕಾಂಗ್ರೆಸ್ ಮೆಚ್ಚುವಂತಹ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ. ಇವೆಲ್ಲ ಕಾರಣದಿಂದಾಗಿ ಕಾಂಗ್ರೆಸ್ ಪಕ್ಷದಿಂದ ಡಾಲಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಸ್ಪತಃ ಮುಖ್ಯಮಂತ್ರಿಗಳು ಗಾಳಿ ಸುದ್ದಿಗೆ ಬ್ರೇಕ್ ಹಾಕಿದ್ದಾರೆ.