ಬೆಂಗಳೂರು:- 2024 ರ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆದರೆ, ಆರಂಭದಲ್ಲಿಯೇ ಮೈತ್ರಿಯಲ್ಲಿ ಬಿರುಕು ಮೂಡಿದ್ದು, ಬಿಜೆಪಿ ನಾಯಕರ ನಡವಳಿಕೆಗಳು ಜೆಡಿಎಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಕ್ಷೇತ್ರ ಹಂಚಿಕೆ ವಿಚಾರ ಹಾಗೂ ಬಿಜೆಪಿ ನಾಯಕರ ನಡವಳಿಕೆಗಳು ಜೆಡಿಎಸ್ ನಾಯಕರನ್ನು ಕೆರಳಿಸಿದ್ದು, ಕೋರ್ ಕಮಿಟಿ ಸಭೆಯಲ್ಲಿ ಮುಖಂಡರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.
ಆರಂಭದಲ್ಲಿಯೇ ನಮ್ಮನ್ನು ಬಿಜೆಪಿ ನಿರ್ಲಕ್ಷ್ಯ ಮಾಡುತ್ತಿದೆ. ಚುನಾವಣಾ ಸಭೆ, ಪ್ರಚಾರವನ್ನು ಬಿಜೆಪಿ ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ. ಏಕಪಕ್ಷೀಯವಾಗಿ ಇಪ್ಪತ್ತು ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಈ ಬಗ್ಗೆ ಜೆಡಿಎಸ್ ವರಿಷ್ಠರನ್ನು ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸಮ್ಮುಖದಲ್ಲಿಯೇ ಜೆಡಿಎಸ್ ಮುಖಂಡರು, ಚುನಾವಣಾ ಉಸ್ತುವಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ. ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ, ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದರು. ಮುಖಂಡರ ಮಾತುಗಳನ್ನು ಶಾಂತ ಚಿತ್ತದಿಂದ ಆಲಿಸಿದ ದೇವೇಗೌಡರು ಮತ್ತು ಕುಮಾರಸ್ವಾಮಿ ಅಸಮಾಧಾನಿತ ಮುಖಂಡರಿಗೆ ಸಮಾಧಾನ ಹೇಳಿದರು.
ಕೋಲಾರ ಕ್ಷೇತ್ರದ ಒಳ್ಳೆಯ ನಿರ್ಧಾರ ತೆಗೆದುಕೊಳ್ಳೋಣ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ ಎಂದು ಸಭೆಗೆ ತಿಳಿಸಿದ ಕುಮಾರಸ್ವಾಮಿ, ಯಾವುದೆ ಕಾರಣಕ್ಕೂ ಪಕ್ಷದ ಹಿತಕ್ಕೆ ವಿರುದ್ಧವಾಗಿ ಹೆಜ್ಜೆ ಇಡುವುದಿಲ್ಲ. ಇದು ಬಿಜೆಪಿ ನಾಯಕರಿಗೂ ಗೊತ್ತಿದೆ ಎಂದು ತಿಳಿಸಿದರು