ಮೈಸೂರು:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತರಿಗೆ ಕಾಂಗ್ರೆಸ್ ಗಾಳ ಹಾಕಿದೆ.
ಇದರ ಭಾಗವಾಗಿ ಮೈಸೂರು ಜಿಲ್ಲೆಯಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ. ಹೌದು..ಮಾಜಿ ಸಚಿವ ಕೋಟೆ ಶಿವಣ್ಣ ಬಿಜೆಪಿ ತೊರೆದು ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ.
ಕೋಟೆ ಶಿವಣ್ಣ ಅವರು ನಾಳೆ(ಮಾರ್ಚ್ 27) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ.ಜೆ ವಿಜಯಕುಮಾರ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅಲ್ಲದೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್ವಿ ರಾಜೀವ್ ಅವರು ಸಹ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
1976ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಶಿವಣ್ಣ, 1978ರಲ್ಲಿ ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 1985ರಲ್ಲಿ ಹೆಚ್ ಡಿ ಕೋಟೆ ಕ್ಷೇತ್ರದಿಂದ ಶಾಸಕರಾಗಿದ್ದರು. 1999 – 2004 ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಹಣಕಾಸು ಕನ್ನಡ ಸಂಸ್ಕೃತಿ ಇಲಾಖೆ ತೋಟಗಾರಿಕೆ ಸೇರಿ ಹಲವು ಖಾತೆ ನಿರ್ವಹಣೆ ಮಾಡಿದ್ದರು. ಬಳಿಕ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದು, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಟೆ ಶಿವಣ್ಣ ಅವರು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿರದ್ದರು. ಆದ್ರೆ, ಇದೀಗ ಕೋಟೆ ಶಿವಣ್ಣ ಅವರು ವಾಪಸ್ ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ