ಮಂಡ್ಯ :- ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗುತ್ತಿದ್ದು, ದಿವಾಳಿ ಅಂಚಿನಲ್ಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಆರೋಪಿಸಿದರು.
ಮದ್ದೂರು ವಿಧಾನಸಭಾ ಕ್ಷೇತ್ರದ ಹೊಸಕೆರೆ, ನಿಲುವಾಗಿಲು ಹಾಗೂ ಬೆಸಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪರ ಬುಧವಾರ ಪ್ರಚಾರ ಕಾರ್ಯ ನಡೆಸಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದರು.
Hubballi: ಶ್ರೀ ಶ್ರೀ ಹರಿ ವಿಠಲ ಪಾಂಡುರಂಗ ದೇವರಿಗೆ ತೊಟ್ಟಿಲೋತ್ಸವ ಸೇವೆ !
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಏರಬೇಕೆಂಬ ದುರುದ್ದೇಶದಿಂದ ರಾಜ್ಯ ಸರ್ಕಾರ ಪುಕ್ಕಟೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ. ಇಂತಹ ಯೋಜನೆಗಳಿಂದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮಾರಕವಾಗಲಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟ ಪರಿಣಾಮ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದ್ದು, ಈ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ನಿರೀಕ್ಷಿಸೋದು ಮೂರ್ಖತನ ಎಂದರು.
ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ. ಐದು ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸುತ್ತಿರುವ ಸರ್ಕಾರ, ಬರದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಮೋಸ ಮಾಡಿದೆ. ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಇಂತಹ ಸಂದರ್ಭದಲ್ಲೂ ರೈತರ ಸಾಲ ಮನ್ನಾ ಮಾಡದೆ, ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ ಎಂದು ಸಬೂಬು ಹೇಳುತ್ತಿದೆ ಎಂದು ಕಿಡಿಕಾರಿದರು.
ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎದುರಾದ ಬರಗಾಲದ ಸನ್ನಿವೇಶದಲ್ಲಿ ಅವರು ಕೇಂದ್ರದ ಮೊರೆ ಹೋಗದೆ, ರೈತರ ಸಾಲವನ್ನು ಮನ್ನಾ ಮಾಡಿದ್ದರು. ಅದೇ ರೀತಿ ಕಾಂಗ್ರೆಸ್ ಸರ್ಕಾರಕ್ಕೂ ಮಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.
ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್ ಮಾತನಾಡಿ,
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಯುಷ್ಮಾನ್ ಯೋಜನೆ, ಜಲಜೀವನ್ ಮಿಷನ್, ಕಿಸಾನ್ ಸಮ್ಮಾನ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಬಾರಿಯೂ ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮತದಾರರು 2 ಲಕ್ಷಕ್ಕೂ ಅಂತರಿದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಜೆಡಿಎಸ್ ಮುಖಂಡ ಡಿ.ಟಿ.ಸಂತೋಷ್ ಮಾತನಾಡಿ,
ರಾಜ್ಯದ ಕಾಂಗ್ರೆಸ್ ಸರ್ಕಾರ ಜನತೆಗೆ ಕಿವಿಗೆ ಹೂ ಮುಡಿಸುವ ಕೆಲಸ ಮಾಡುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮಹಿಳೆಯರಿಗೆ 2000 ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಮತ್ತೊಂದು ಕಡೆ ಮದ್ಯದ ಬೆಲೆಯಲ್ಲಿ ಹೆಚ್ಚಿಸಿದ್ದಾರೆ.
ಜಮೀನುಗಳಿಗೆ ರೈತರು ವಿದ್ಯುತ್ ಪರಿವರ್ತಕ ಹಾಕಬೇಕಾದರೆ ಈಗ 3 ಲಕ್ಷ ಹಣ ಕಟ್ಟಬೇಕು. ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದ್ದಾರೆ ಎಂದು ದೂರಿದರು. ಕಾಂಗ್ರೆಸ್ನವರು ಹಣ, ತೋಳ್ಬಲ ಹಾಗೂ ಹೆಂಡದ ಬಲದಿಂದ ಚುನಾವಣೆ ಮಾಡುತ್ತಾರೆ ಎಂದು ದೂರಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್, ಜಿಪಂ ಮಾಜಿ ಸದಸ್ಯರಾದ ಮರಿಹೆಗ್ಗಡೆ, ಬೋರಯ್ಯ, ಪುರಸಭಾ ಸದಸ್ಯೆ ಪ್ರಿಯಾಂಕಾ ಅಪ್ಪುಗೌಡ ಮುಖಂಡರಾದ ಕಾಳಯ್ಯ, ಸ್ವಾಮಿ, ದಯಾನಂದ, ಮಧು, ಲೋಕೇಶ್ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ