ಬೆಂಗಳೂರು:- ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ..
ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಗಳಲ್ಲಿ ಸಂತಾಪ ಸೂಚಿಸಿದ್ದಾರೆ.
ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತು ಮಾಡಿ – ಜೆಡಿಎಸ್ ಶಾಸಕ ಒತ್ತಾಯ..!
ಈ ಸಂಬಂಧ x ಮಾಡಿರುವ ಅವರು,ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ.
ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಟ್ವೀಟ್ ಮಾಡಿ, ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ಶ್ರೀ ವಿ ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು. ಪ್ರಸ್ತುತ ಕಾಲಮಾನದಲ್ಲಿ ಮಾನ್ಯ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದಿದ್ದಾರೆ.
ಅದರಂತೆ ಸಿಟಿ ರವಿ, ಸುಧಾಕರ್, ವಿ ಸೋಮಣ್ಣ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.