ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಈ ನಡುವೆಯೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಇಂದು ಪಂದ್ಯ ನಡೆಯಲಿದೆ.
ಇದಕ್ಕೂ ಮುನ್ನ ಇದೇ ಮೈದಾನದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ ನಾಲ್ಕು ವಿಕೆಟ್ಗಳ ಜಯ ಸಾಧಿಸಿತ್ತು. ಅಲ್ಲದೆ ಆಡಿರುವ ಕಳೆದ ನಾಲ್ಕು ಪಂದ್ಯಗಳಲ್ಲಿ ಆರ್ಸಿಬಿ ಜಯ ದಾಖಲಿಸಿದೆ. ಹೀಗಾಗಿ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಜೊತೆಗೆ ಪ್ಲೇಆಫ್ಗೆ ಇನ್ನಷ್ಟು ಹತ್ತಿರವಾಗುವ ಲೆಕ್ಕಾಚಾರದೊಂದಿಗೆ ಆರ್ಸಿಬಿ ಕಣಕ್ಕಿಳಿಯುತ್ತಿದೆ. ಆದರೆ ಒಂದು ವಾರದಿಂದ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದ್ದು, ಇಂದಿನ ಪಂದ್ಯಕ್ಕೆ ವರುಣ ಅಡ್ಡಿಪಡಿಸುತ್ತಾನಾ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿದೆ.
ಬೆಂಗಳೂರಿನಲ್ಲಿ ಕಳೆದ 1 ವಾರದಿಂದ ಉತ್ತಮವಾಗಿ ಮಳೆಯಾಗುತ್ತಿದೆ. ಹೀಗಾಗಿ ನಗರದಲ್ಲಿ ತಾಪಮಾನ ಕೊಂಚ ತಗ್ಗಿದೆ. ಇಷ್ಟು ದಿನ ಬೆಂಗಳೂರಿನಲ್ಲಿ ಮಳೆ ಬರಲಿ ಎಂದು ಆಶಿಸುತ್ತಿದ್ದ ಕ್ರಿಕೆಟ್ ಅಭಿಮಾನಿಗಳು ನಾಳೆ ಮಾತ್ರ ಮಳೆ ಬಾರದಿರಲಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಇನ್ನು ಅಕ್ಯುವೆದರ್ ಪ್ರಕಾರ ಭಾನುವಾರದಂದು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೆ ಪಂದ್ಯವು ರಾತ್ರಿ 7.30 ಕ್ಕೆ ಪ್ರಾರಂಭವಾಗಲ್ಲಿದ್ದು, ಈ ವೇಳೆಯೂ ಅಂದರೆ ಸಂಜೆಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಇಂದು ಶೇ.55ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.