ಬೆಂಗಳೂರು: ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಸಿಎಂ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ನೆಹರೂ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶವನ್ನ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು ಎಂದು ವಿವರಿಸಿದರು.
BBMP Recruitment 2024: ಬಿಬಿಎಂಪಿಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿ..! ಇಂದೇ ಅರ್ಜಿ ಸಲ್ಲಿಸಿ
ನೆಹರೂ ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್ ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸಬಲ್ಲರು. ನೆಹರೂ ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು ಎಂದು ಉದಾಹರಣೆಗಳ ಸಮೇತ ವಿವರಿಸಿದರು.