ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಆ ಮೂಲಕ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಇದು ಮೋದಿ 3.0 ಸರ್ಕಾರದ ಮೊದಲ ಬಜೆಟ್. ವೀಕ್ಷಿತ್ ಭಾರತ್ 2047 ವಿಷನ್ಗೆ ಅನುಗುಣವಾಗಿ ಆರ್ಥಿಕತೆಯ ವಿವಿಧ ವಿಭಾಗಗಳಲ್ಲಿನ ಉಪಕ್ರಮಗಳಿಗೆ ಉತ್ತೇಜನ ನೀಡುವ ನಿರೀಕ್ಷೆಯಿದೆ.
ಮಹಿಳೆಯರು ಸೇರಿ 7 ಜನರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ: ಗಡಿಪಾರು ರೌಡಿಶೀಟರ್ ಗ್ಯಾಂಗ್ನಿಂದ ಕೃತ್ಯ!?
ಈ ವರ್ಷ ದೇಶ ಎರಡು ಬಜೆಟ್ಗಳನ್ನು ನೋಡುತ್ತಿದೆ. ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿಯಲ್ಲಿ ಮಧ್ಯಂತರ ಮತ್ತು ಇಂದು ಪೂರ್ಣ ಬಜೆಟ್ ಮಂಡನೆಯಾಗಲಿದೆ. ಸಾರ್ವತ್ರಿಕ ಚುನಾವಣೆಗೆ ಮುನ್ನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಸಾಧ್ಯವಾಗದ ಕಾರಣ ಈ ವ್ಯವಸ್ಥೆ ಮಾಡಲಾಗಿದೆ.
ಬಜೆಟ್ ನಿರೀಕ್ಷೆಗಳು ಹೀಗಿವೆ
ಆದಾಯ ತೆರಿಗೆ ಬಗ್ಗೆ ಜನರ ನಿರೀಕ್ಷೆಗಳು
ವಿನಾಯಿತಿ ಮತ್ತು ಪ್ರಮಾಣಿತ ಕಡಿತ ಮಿತಿಗಳನ್ನು ಹೆಚ್ಚಿಸುವುದು ಸೇರಿದಂತೆ ಆದಾಯ ತೆರಿಗೆ ಬಗ್ಗೆ ಸೀತಾರಾಮನ್ ಬದಲಾವಣೆಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.
ಸ್ಟಾಂಡರ್ಡ್ ಡಿಡಕ್ಷನ್ ಮೊತ್ತದ ಏರಿಕೆ
ಸಂಬಳ ಪಡೆಯುವ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಸ್ಟಾಂಡರ್ಡ್ ಡಿಡಕ್ಷನ್ ಮೊತ್ತವನ್ನು 70 ಸಾವಿರ ರೂ. ಅಥವಾ ಒಂದು ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸದ್ಯ, ಹೊಸ ಹಾಗೂ ಹಳೆಯ ತೆರಿಗೆ ಪದ್ಧತಿಯಲ್ಲೂ 50 ಸಾವಿರ ರೂ. ಸ್ಟಾಂಡರ್ಡ್ ಡಿಡಕ್ಷನ್ ಇದೆ. ಇದನ್ನು, 1 ಲಕ್ಷ ರೂ.ಗೆ ಏರಿಕೆ ಮಾಡಿದರೆ, ಸಂಬಳದಾರರು ಹೆಚ್ಚಿನ ತೆರಿಗೆ ಹಣವನ್ನು ಉಳಿತಾಯ ಮಾಡಬಹುದಾಗಿದೆ. ಹಣದುಬ್ಬರ ಏರಿಕೆ ಸೇರಿ ಹಲವು ಕಾರಣಗಳಿಂದಾಗಿ ಸ್ಟಾಂಡರ್ಡ್ ಡಿಡಕ್ಷನ್ ಅಥವಾ ತೆರಿಗೆ ವಿನಾಯಿತಿ ಮೊತ್ತವನ್ನು ಏರಿಕೆ ಮಾಡಬೇಕು ಎಂಬುದು ಬೇಡಿಕೆಯಾಗಿದೆ. ಹಾಗಾಗಿ, ಮೊತ್ತವನ್ನು ಏರಿಕೆ ಮಾಡಲು ನಿರ್ಮಲಾ ಸೀತಾರಾಮನ್ ಅವರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಟಾಂಡರ್ಡ್ ಡಿಡಕ್ಷನ್ ಎಂಬುದು ತೆರಿಗೆ ವಿನಾಯಿತಿ ಆಗಿದ್ದು, ಇದಕ್ಕಾಗಿ ನೌಕರರು ಹೂಡಿಕೆ ಮಾಡಬೇಕಿಲ್ಲ. ತೆರಿಗೆ ಪಾವತಿಸಲು ಅರ್ಹವಿರುವವರು ಸ್ಟಾಂಡರ್ಡ್ ಡಿಡಕ್ಷನ್ ಮೊತ್ತದ ಅಡಿಯಲ್ಲಿ ವಿನಾಯಿತಿ ಪಡೆಯಲಿದ್ದಾರೆ.
ಸೆಕ್ಷನ್ 80 ಸಿ ಅಡಿಯಲ್ಲಿ ವಿನಾಯಿತಿ ಮೊತ್ತ ಹೆಚ್ಚಳ
ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಸಿ ಅಡಿಯಲ್ಲಿ ಸಂಬಳದಾರರು ಹೂಡಿಕೆ ಹಾಗೂ ವೆಚ್ಚಗಳ ಮೇಲೆ ವಾರ್ಷಿಕವಾಗಿ 1.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಪಡೆಯುತ್ತಾರೆ. ಗೃಹ ಸಾಲದ ಅಸಲು, ಬಡ್ಡಿ, ಆರೋಗ್ಯ ವಿಮೆಯ ಪ್ರೀಮಿಯಂ ಮೊತ್ತ, ಪಿಪಿಎಫ್ ಹೂಡಿಕೆ ಸೇರಿ ಹಲವು ರೀತಿಯ ಹೂಡಿಕೆಗಳು ಹಾಗೂ ವೆಚ್ಚಗಳ ಮೂಲಕ 1.5 ಲಕ್ಷರೂ.ಗೆ ತೆರಿಗೆ ವಿನಾಯಿತಿ ಪಡೆಯಬಹುದಾಗಿದೆ. ಈ ಮೊತ್ತವನ್ನು ಕೇಂದ್ರ ಸರ್ಕಾರವು 1.5 ಲಕ್ಷ ರೂ.ನಿಂದ 2 ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇದರಿಂದ ಮಧ್ಯಮ ವರ್ಗದವರಿಗೆ ಭಾರಿ ಅನುಕೂಲವಾಗಲಿದೆ.
ಹೊಸ ತೆರಿಗೆ ಸ್ಲ್ಯಾಬ್ ಘೋಷಣೆ ಸಾಧ್ಯತೆ
“ಬಜೆಟ್ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಹಳೆಯ ತೆರಿಗೆ ಪದ್ಧತಿಯಲ್ಲಿ 2.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಇದ್ದು, ಈ ಮೊತ್ತವನ್ನು 5 ಲಕ್ಷ ರೂ.ಗೆ ಏರಿಕೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಇವುಗಳ ಜತೆಗೆ ನೌಕರರ ಮನೆ ಬಾಡಿಗೆ ಭತ್ಯೆ (HRA) ಹಾಗೂ 80 ಟಿಟಿಎ ಅಡಿಯಲ್ಲಿ ಮೊತ್ತವನ್ನು 10 ಸಾವಿರ ರೂ.ನಿಂದ 50 ಸಾವಿರ ರೂ.ಗೆ ಏರಿಕೆ ಮಾಡುವುದು ಸೇರಿ ಹಲವು ನಿರೀಕ್ಷೆಗಳಿವೆ.
ಆಯುಷ್ಮಾನ್ ಭಾರತ್ ವಿಮೆ ಮೊತ್ತ ಹೆಚ್ಚಳ?
ದೇಶದ ಸುಮಾರು 50 ಕೋಟಿ ಬಡವರಿಗೆ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು, 70 ವರ್ಷ ದಾಟಿದ ಎಲ್ಲರಿಗೂ ಆಯುಷ್ಮಾನ್ ಭಾರತ್ ಯೋಜನೆಯ ಸೌಲಭ್ಯವನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಜತೆಗೆ, ವಿಮಾ ಮೊತ್ತವನ್ನು 5 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಏರಿಕೆ ಮಾಡುವ ಕುರಿತು ಕೂಡ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,076 ಕೋಟಿ ರೂ. ಹೆಚ್ಚುವರಿಯಾಗಿ ಖರ್ಚಾಗಲಿದೆ ಎಂದು ತಿಳಿದುಬಂದಿದೆ.
ಹಳೆಯ ಆಡಳಿತದ ತೆರಿಗೆದಾರರಿಗೆ ಪ್ರೋತ್ಸಾಹ
₹ 15 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿರುವ ಸ್ಥಾಪಿತ ತೆರಿಗೆದಾರರು ಇನ್ನೂ ಹಳೆಯ ಆಡಳಿತವನ್ನು ಬಯಸುತ್ತಾರೆ. ಹೊಸ ಆಡಳಿತಕ್ಕೆ ಬದಲಾಯಿಸಲು ಸರ್ಕಾರವು ಅವರನ್ನು ಪ್ರೋತ್ಸಾಹಿಸುವ ನಿರೀಕ್ಷೆಯಿದೆ, ಪ್ರಾಯಶಃ 25% ತೆರಿಗೆ ದರದೊಂದಿಗೆ ₹15 ಲಕ್ಷದಿಂದ ₹18 ಲಕ್ಷದವರೆಗಿನ ಆದಾಯಕ್ಕೆ ಹೊಸ ಸ್ಲ್ಯಾಬ್ ಅನ್ನು ಪರಿಚಯಿಸಬಹುದು.