ಬೆಂಗಳೂರು:- ಇಂದು JDS-BJP ನಾಯಕರ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ಸಿಗಲಿದೆ.
ಮುಡಾ ಹಗರಣ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ತಲೆನೋವಾಗಿದೆ. ಏಕೆಂದರೆ ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ನೀಡಬೇಕೆಂದು ಇಂದಿನಿಂದ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಬೆಂಗಳೂರು-ಮೈಸೂರು ಪಾದಯಾತ್ರೆ ಮಾಡಲು ತಯಾರಾಗಿವೆ.
ಮೈಸೂರು ಚಲೋ ಪಾದಯಾತ್ರೆ ಆರಂಭಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಶನಿವಾರ ಬೆಳಗ್ಗೆ 7.45ಕ್ಕೆ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ಚಾಮುಂಡೇಶ್ವರಿ ದರ್ಶನ ಮಾಡಿ ಪೂಜೆ ಸಲ್ಲಿಸಿ ಬಳಿಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಇಂದು ಬೆಳಿಗ್ಗೆ 8.00 ಗಂಟೆಗೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಇರುವ ಜೆ.ಕೆ. ಗ್ರ್ಯಾಂಡ್ ಅರೆನಾ ಸೆಂಟರ್ನಲ್ಲಿ ಪಾದಯಾತ್ರೆ ಉದ್ಘಟನಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್ದಾಸ್ ಅಗರ್ವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ಜೆಡಿಎಸ್ ನಾಯಕ ಸಿ.ಬಿ. ಸುರೇಶ್ ಬಾಬು, ಮಾಜಿ ಸಚಿವ ಜಿ.ಟಿ. ದೇವೇಗೌಡ, ಕೇಂದ್ರ ಸಚಿವರು, ಕೋರ್ ಕಮಿಟಿ ಸದಸ್ಯರು, ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.