ಕಾರವಾರ:- ಶಿರೂರಿನಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಭಾಗದಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಭೂ ಕುಸಿತವಾಗುವ ವರದಿಯನ್ನು ನೀಡಿದೆ.
ಒಂದೆಡೆ ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ವಾಹನಗಳಾದರೆ, ಮತ್ತೊಂದೆಡೆ ಅಲ್ಲಲ್ಲಿ ಭೂ ಕುಸಿತ ಸಂಭವಿಸುತ್ತಿದೆ. ಶಿರೂರಿನ ಹೆದ್ದಾರಿಯ ಮತ್ತೊಂದು ಭಾಗದಲ್ಲಿ ನಾಲ್ಕಕ್ಕೂ ಹೆಚ್ಚು ಕಡೆ ಭೂ ಕುಸಿತವಾಗುತ್ತಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.
ಜುಲೈ 16 ರಂದು ಭೂ ಕುಸಿತವಾಗಿ 11 ಜನರು ಸಾವನ್ನಪ್ಪಿದ್ದರು. ಇದರಲ್ಲಿ ಮೂರು ಜನರ ಶವ ಶೋಧಕ್ಕಾಗಿ ಕಾರ್ಯಾಚರಣೆ ಮಾಡಲಾಗಿದೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಜಿಎಸ್ಐ ತಜ್ಞರ ತಂಡ ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಭೂ ಕುಸಿತದ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಾದುಹೋಗುವ ಕಾರವಾರದ ಬಿಣಗ, ಅಂಕೋಲದ ಶಿರೂರು, ಹೊನ್ನಾವರದ ಗುಣವಂತೆ ಹೆದ್ದಾರಿ, ಭಟ್ಕಳದ ಹೆದ್ದಾರಿ ಭಾಗದಲ್ಲಿ ಮತ್ತೆ ಭೂ ಕುಸಿತವಾಗಲಿದೆ ಎಂದು ಈ ವರದಿಯಲ್ಲಿ ತಿಳಿಸಲಾಗಿತ್ತು. ಜೊತೆಗೆ ಜಿಲ್ಲೆಯ ಭೂ ಕುಸಿತ ಭಾಗವನ್ನು ಮೂರು ಭಾಗವಾಗಿ ವಿಂಗಡಿಸಲಾಗಿದೆ.