ಭಾರತ ತಂಡದ ಯುವ ಆರಂಭಿಕ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಅವರನ್ನು ಆಸ್ಟ್ರೇಲಿಯಾ ಸ್ಟಾರ್ ಆಟಗಾರರು ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಸ್ಟೀವನ್ ಸ್ಮಿತ್, ಮಿಚೆಲ್ ಮಾರ್ಷ್, ಮಾರ್ನಸ್ ಲಾಬುಶೇನ್ ಸೇರಿದಂತೆ ಆಸೀಸ್ ಹಿರಿಯ ಆಟಗಾರರು, ಯಶಸ್ವಿ ಜೈಸ್ವಾಲ್ ಭಾರತ ತಂಡದ ಭವಿಷ್ಯದ ಸೂಪರ್ ಸ್ಟಾರ್ ಆಟಗಾರ ಎಂದು ಕೊಂಡಾಡಿದ್ದಾರೆ.
2018-19ರ ಸಾಲಿನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ, ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು. ನಂತರ 2020-21ರ ಸಾಲಿನಲ್ಲಿ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಟೀಮ್ ಇಂಡಿಯಾ, ಕಾಂಗರೂಗಳ ನಾಡಿನಲ್ಲಿ ಟೆಸ್ಟ್ ಸರಣಿಯನ್ನು ಗೆದ್ದು ಬೀಗಿತ್ತು. ಆದರೆ, ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯ ರಹಾನೆ ಅವರು ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ತಂಡ ಈ ಬಾರಿ ಹೆಚ್ಚಿನ ಯುವ ಆಟಗಾರರೊಂದಿಗೆ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದೆ.
ಅಂದ ಹಾಗೆ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಜೊತೆ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ. ಇಂಗ್ಲೆಂಡ್ ವಿರುದ್ಧ ಕಳೆದ ಟೆಸ್ಟ್ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ಅವರು ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ 700ಕ್ಕೂ ಹೆಚ್ಚಿನ ರನ್ ಗಳಿಸಿ ಎಲ್ಲರ ಗಮನವನ್ನು ಸೆಳೆದಿದ್ದರು. ಇದೀಗ ಅವರು ಅದೇ ಲಯವನ್ನು ಮುಂದುವರಿಸಲು ಎದುರು ನೋಡುತ್ತಿದ್ದಾರೆ.