ಬೆಂಗಳೂರು: ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ಉಪಚುನಾವಣೆಗೆ ಸಂಬಂಧಿಸಿ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (C T Ravi) ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ (BJP) ಕಾರ್ಯಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಉಪಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆ ಆಗಬಹುದು. 3 ಉಪಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಿ, ಗೆಲ್ಲುವ ದೃಷ್ಟಿಯಿಂದ ವಿಶೇಷ ಪ್ರಯತ್ನ ಮಾಡಬೇಕು ಎಂಬ ಚರ್ಚೆ ನಡೆದಿದೆ ಎಂದರು.
MUDA Case: ಹೈಕೋರ್ಟ್ʼನಲ್ಲಿ ಸಿಎಂಗೆ ಮುಜುಗರವಾದ್ರೆ ಎದುರಾಗೋ ಸವಾಲುಗಳೇನು
ಅಭ್ಯರ್ಥಿ ಸಂಬಂಧಿಸಿ ಎನ್ಡಿಎ (NDA) ಮಿತ್ರ ಪಕ್ಷವಾದ ಜೆಡಿಎಸ್ (JDS) ಮತ್ತು ನಮ್ಮ ಕೇಂದ್ರೀಯ ನಾಯಕರ ಜೊತೆ ಸಮಾಲೋಚನೆ ಮಾಡಿ, ನಿರ್ಣಯಿಸಲು ಕೋರ್ ಕಮಿಟಿ ನಿರ್ಧರಿಸಿದೆ. ಈ ಹಿಂದೆ ಶ್ರೀನಿವಾಸ ಪೂಜಾರಿಯವರು ಚುನಾಯಿತರಾಗಿದ್ದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ಅ.21ರಂದು ನಡೆಯಲಿದೆ. ಆ ಉಪಚುನಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೋಗಿ ಅಪೇಕ್ಷಿತರ ವರದಿ ಹಾಗೂ 2 ಜಿಲ್ಲೆಗಳ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿದ್ದರು. ಕೇಂದ್ರೀಯ ನಾಯಕತ್ವದ ಜೊತೆ ಚರ್ಚೆ ಮಾಡಿ ನಿರ್ಣಯ ತೆಗೆದುಕೊಳ್ಳುವ ಅಧಿಕಾರವನ್ನು ರಾಜ್ಯಾಧ್ಯಕ್ಷರಿಗೆ ಕೊಡಲಾಗಿದೆ ಎಂದು ತಿಳಿಸಿದರು.
ಪ್ರಚಲಿತ ರಾಜಕೀಯ ವಿದ್ಯಮಾನಗಳ ಕುರಿತು ಕೂಡ ಚರ್ಚಿಸಲಾಗಿದೆ. ಈ ಸರ್ಕಾರದ ಮೇಲೆ ನಿರಂತರವಾಗಿ ಬರುತ್ತಿರುವ ಆಧಾರಸಹಿತವಾದ ಭ್ರಷ್ಟಾಚಾರದ ಆರೋಪಗಳು, ಅದರ ವಿರುದ್ಧ ಇನ್ನಷ್ಟು ಜನಾಂದೋಲನ ರೂಪಿಸುವ ಕುರಿತು ಚರ್ಚೆ ಮಾಡಿದ್ದೇವೆ. ಈ ಸರ್ಕಾರದ ಹಿಂದೂ ವಿರೋಧಿ ನೀತಿ, ಗಣೇಶೋತ್ಸವದ ಮೇಲೆ ನಿರ್ಬಂಧ ಹೇರುತ್ತಿರುವುದು, ಗಣೇಶೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಳ್ಳದಂತೆ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ, ಬಜರಂಗದಳದ ಮುಖಂಡರ ಮೇಲೆ ದಿಗ್ಬಂಧನವನ್ನು ಹಾಕುತ್ತಿರುವುದು, ಓಲೈಕೆಯ ರಾಜಕಾರಣ ಕುರಿತು ಚರ್ಚಿಸಿದ್ದೇವೆ. ಈ ಸಂಬಂಧ ಪರಿವಾರ ಸಂಘಟನೆಗಳ ಪ್ರಮುಖರ ಜೊತೆ ಸಮಾಲೋಚನೆ ನಡೆಸಿ ಹೋರಾಟ ನಡೆಸುವ ಚಿಂತನೆ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ನಡೆದಿದೆ ಎಂದು ಹೇಳಿದರು.