ಬೆಂಗಳೂರು: ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.
ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ.
ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು.
ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.
ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. ಬಿಜೆಪಿ, ಜೆಡಿಎಸ್ (BJP, JDS) ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.
ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.