ದ್ವಿಪಕ್ಷೀಯ ಸಂಬಂಧ ವೃದ್ಧಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲು ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ನಾಲ್ಕು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದಾರೆ.
ಮೊಹಮ್ಮದ್ ಮುಯಿಝ ಅವರು ಪತ್ನಿ, ಮಾಲ್ದೀವ್ಸ್ನ ಮೊದಲ ಮಹಿಳೆ ಸಜೀದಾ ಮೊಹಮ್ಮದ್ ಅವರೊಂದಿಗೆ ದೆಹಲಿಗೆ ಆಗಮಿಸಿದ್ದು ಇವರನ್ನು ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಅವರು ಸ್ವಾಗತಿಸಿದರು.
ಅಕ್ಟೋಬರ್ 6ರಿಂದ 10ರವರೆಗಿನ ಭಾರತ ಭೇಟಿ ವೇಳೆ ಮುಯಿಝು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ದ್ವಿಪಕ್ಷೀಯ ಸಂಬಂಧ, ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಮುಯಿಝು ಅವರು ಜೂನ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ಭಾರತಕ್ಕೆ ಭೇಟಿ ನೀಡಿದ್ದರು. ದ್ವಿಪಕ್ಷೀಯ ಸಂಬಂಧ ಮಾತುಕತೆಗೆ ಇದು ಅವರ ಮೊದಲ ಭೇಟಿಯಾಗಿದೆ. ಈ ವೇಳೆ ಮುಯಿಝು ಅವರು ಬೆಂಗಳೂರಿಗೂ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.