ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್ಲೈನ್ ಬುಕ್ಕಿಂಗ್ ಕಡ್ಡಾಯ ಮಾಡಲಾಗಿದೆ. ಶಬರಿಮಲೆ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗೆ ಮುನ್ನ ಕೇರಳ ಸರ್ಕಾರವು ಈ ಬಾರಿ ಆನ್ಲೈನ್ ಬುಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ.
ದಿನಕ್ಕೆ ಗರಿಷ್ಠ 80,000 ಭಕ್ತರಿಗೆ ಅವಕಾಶ ಕಲ್ಪಿಸುವ ಸೌಲಭ್ಯ ಕಲ್ಪಿಸಲಾಗುವುದು. ನಿಲಕ್ಕಲ್ ಮತ್ತು ಎರುಮೇಲಿಯಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ವಂ ಸಚಿವ ವಿಎನ್ ವಾಸವನ್ ಹೇಳಿದ್ದಾರೆ. ಯಾತ್ರಿಕರಿಗೆ ಬುಕಿಂಗ್ ಸಮಯದಲ್ಲಿ ಪ್ರಯಾಣದ ಮಾರ್ಗವನ್ನು ಆಯ್ಕೆ ಮಾಡುವ ಅವಕಾಶವನ್ನು ಒದಗಿಸಲಾಗುತ್ತದೆ. ಹೀಗಾಗಿ, ಯಾತ್ರಿಕರು ಕಡಿಮೆ ದಟ್ಟಣೆ ಇರುವ ಮಾರ್ಗವನ್ನು ಆಯ್ಕೆ ಮಾಡಬಹುದು.
ಸಾಂಪ್ರದಾಯಿಕ ಅರಣ್ಯ ಮಾರ್ಗದಲ್ಲಿ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು ಗುರುತಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು.
ಕಳೆದ ವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಆದ್ದರಿಂದ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಭಾರಿ ಅವ್ಯವಸ್ಥೆ ಉಂಟಾಗಿತ್ತು. ಭಕ್ತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು, ಸರ್ಕಾರದ ವಿರುದ್ಧ ಆಕ್ರೋಶಗಳು ಭುಗಿಲೆದ್ದಿದ್ದವು. ಈ ಹಿನ್ನೆಲೆ ಭಕ್ತರ ನಿರ್ವಹಣೆ ಸಮರ್ಪಕ ಆಗಿಸುವ ಹಿನ್ನೆಲೆ ಆನ್ಲೈನ್ನಲ್ಲಿ ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.