ಬೆಂಗಳೂರು:-ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 34,863 ಸರ್ಕಾರಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸೂಚನೆ ನೀಡಿದರು.
ಈ ವೇಳೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು. 371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.