ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಮುಂದುವರೆದಿದೆ. ಇಂದೂ ಸಹ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಿನ್ನೆ ರಾಮನಗರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗಿದೆ. ಇನ್ನು, ಕೋಲಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಿದೆ.
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಅವಾಂತರಗಳನ್ನೇ ಸೃಷ್ಟಿಸಿದೆ. ಇದರ ಪರಿಣಾಮ ಕರ್ನಾಟಕದ ಮೇಲೂ ತಟ್ಟಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೊದಲ ಎರಡು ದಿನ ಅಂದರೆ ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರಿ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ.
ಇಂದು ಮತ್ತು ನಾಳೆ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಮತ್ತು ರಾಮನಗರ, ಮಂಡ್ಯ, ಹಾಸನ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಇನ್ನೂ ಡಿ.5 ಮತ್ತು ಡಿ.6ರಂದು ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆಯು ಮುನ್ಸೂಚನೆ ಕೊಟ್ಟಿದೆ.
ಹಲವು ಜಿಲ್ಲೆಗಳಲ್ಲಿ ಇಂದು ರಜೆ:
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.