ತುಮಕೂರು: ನೀರಾವರಿ ಯೋಜನೆಯ ವಿದ್ಯುತ್ ಬಿಲ್ 70 ಲಕ್ಷ ರೂಪಾಯಿ ಪಾವತಿಸಿ ಎಂದು ಸಿದ್ದಗಂಗಾ ಮಠಕ್ಕೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಪತ್ರ ಬರೆದಿದೆ. ಹೌದು ಸರ್ಕಾರಿ ನೀರಾವರಿ ಯೋಜನೆಗೆ ಕೆಐಎಡಿಬಿ ಬಳಸಿದ ಬರೊಬ್ಬರಿ 70,31,438 ರೂ. ವಿದ್ಯುತ್ ಬಿಲ್ನ್ನು ಸಿದ್ದಗಂಗಾ ಮಠ ಭರಿಸುವಂತೆ ಕೆಐಎಡಿಬಿ ಪತ್ರ ಬರೆದಿದೆ. ಮಂಡಳಿಯ ಆರ್ಥಿಕ ಪರಿಸ್ಥಿತಿಯು ಸುಸ್ಥಿತಿಯಲ್ಲಿ ಇಲ್ಲದಿರುವುದರಿಂದ ಈ ವಿದ್ಯುತ್ ಬಿಲ್ ಅನ್ನು ಭರಿಸುವಂತೆ ಕೋರಲಾಗಿದೆ ಎಂದು ಪತ್ರದಲ್ಲಿ ಒಕ್ಕಣೆ ಬರೆಯಲಾಗಿದೆ.
ಗುರುವಾರ ಈ ಕೆಲಸಗಳನ್ನೂ ಮಾಡಿದ್ರೆ ಸಂತೋಷ, ಸಮೃದ್ಧಿಯಿಂದ ನಿಮ್ಮ ಜೀವನ ತುಳುಕುತ್ತೆ..!
ಸಿದ್ದಗಂಗಾ ಮಠದ ಸನಿಹದಲ್ಲೇ ಇರುವ ದೇವರಾಯಪಟ್ಟಣ ಕೆರೆಗೆ ಕೆಐಎಡಿಬಿ ಪೈಪ್ಲೈನ್ ಮೂಲಕ ಹೊನ್ನೆನಹಳ್ಳಿಯಿಂದ ಪ್ರಾಯೋಗಿಕವಾಗಿ ನೀರು ಹರಿಸಿದೆ. ಈ ಯೋಜನೆ ಪರಿಪೂರ್ಣವಾಗಿ ಜಾರಿಯಾದರೆ ಸಿದ್ದಗಂಗಾ ಮಠ ಸೇರಿದಂತೆ ದೇವರಾಯಪಟ್ಟಣ, ಮಾದನಾಯಕನ ಪಾಳ್ಯ, ಕುಂದೂರು ಗ್ರಾಮಕ್ಕೆ ನೀರು ಪೂರೈಕೆ ಆಗಲಿದೆ. ಇಲ್ಲಿವರೆಗೆ ಪ್ರಾಯೋಗಿಕವಾಗಿ ಅಷ್ಟೇ ನೀರು ಹರಿಸಲಾಗಿದೆ. ಗ್ರಾಮಗಳಿಗೆ ವಿತರಣೆ ಆಗುತ್ತಿಲ್ಲ. ಇದಕ್ಕೆ ವೆಚ್ಚವಾದ ವಿದ್ಯುತ್ ಬಿಲ್ನ್ನು ಸಿದ್ದಗಂಗಾ ಮಠ ಪಾವತಿಸಬೇಕು ಎಂದು ಕೆಐಎಡಿಬಿ ಬರೆದಿರುವ ಪತ್ರ ಈಗ ವಿವಾದಕ್ಕೆ ಕಾರಣವಾಗಿದೆ.
ಪತ್ರದಲ್ಲೇನಿದೆ?
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ತುಮಕೂರು ತಾಲೂಕು ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಯವರೆಗೆ ಪೈಪ್ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರಸಕ್ತ 2024ನೇ ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ನೀರು ಹರಿಸಲಾಗಿದೆ. ಸದರಿ ಕೆರೆಯಿಂದ ನೀರನ್ನು ಸಿದ್ದಗಂಗಾ ಮಠದ ದೈನಂದಿನ ಕೆಲಸ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತಿರುತ್ತದೆ.
2023ರ ಅ.31ರಿಂದ ಹಾಗೂ 2024ರ ಮಾ.02ರವರೆಗೆ ಒಟ್ಟು 70,31,438 ರೂ. ವಿದ್ಯುತ್ ಬಿಲ್ಗಳನ್ವಯ ಬೆಸ್ಕಾಂಗೆ ಹಣ ಪಾವತಿಸಬೇಕಾಗಿರುತ್ತದೆ. ಪ್ರಸ್ತುತ ಮಂಡಳಿಯು ಆರ್ಥಿಕ ಪರಿಸ್ಥಿತಿಯು ಸುಸ್ಥಿತಿಯಲ್ಲಿ ಇಲ್ಲದಿರುವುದರಿಂದ ನೀರು ಸರಬರಾಜಿನ ವಿದ್ಯುತ್ ಬಳಕೆಯ ವೆಚ್ಚವನ್ನು ಸಿದ್ಧಗಂಗಾ ಮಠದ ವತಿಯಿಂದ ಭರಿಸುವಂತೆ ತಿಳಿಸಲು ಕೆಐಎಡಿಬಿ ನಿರ್ದೇಶಿಸಿದೆ ಎಂದು ಬರೆಯಲಾಗಿದೆ.
ಏ.6ರಂದು ಕೆಐಎಡಿಬಿಯಿಂದ ಸಿದ್ದಗಂಗಾ ಮಠಕ್ಕೆ ಪತ್ರ ಬಂದಿದೆ. ಏ.15ರಂದು ಕೆಐಎಡಿಬಿಗೆ ಸಿದ್ದಗಂಗಾ ಮಠದಿಂದ ಮರು ಪತ್ರ ರವಾನೆಯಾಗಿದೆ. ಇದೊಂದು ಸರ್ಕಾರಿ ಯೋಜನೆಯಾಗಿದ್ದರಿಂದ ಮಠದಿಂದ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಿಲ್ಲ ಎಂದು ಸಿದ್ದಗಂಗಾ ಮಠದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.