ಬೆಂಗಳೂರು:- ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ 1924ರ ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ನಿಧನದಿಂದ ರದ್ದುಗೊಳ್ಳಲಾಯಿತು. ಈ ಕಾರಣಕ್ಕೆ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ
ಇಂದು ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ ಹಾಗೂ ಸಾರ್ವಜನಿಕ ಸಮಾವೇಶ ಆಯೋಜಿಸಲಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಳಗಾವಿಗೆ ಆಗಮಿಸಿದ್ದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ಹೋಗಿದ್ದಾರೆ .
ಬೆಳಗಾವಿಯಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ವಿಷಯ ತಿಳಿಸಿದರು. ಇದೇ ವೇಳೆ, ರಾಜ್ಯಾದ್ಯಂತ ಏಳು ದಿನಗಳ ಶೋಕಾಚರಣೆ ಹಾಗೂ ಡಿ. 27ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ಸರ್ಕಾರಿ ರಜೆ ಘೋಷಿಸಲಾಯಿತು.