ಕೊಪ್ಪಳ:- ತೋಳವೊಂದು ಐದು ಮರಿಗಳಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಬಂಕಾಪುರ ತೋಳಧಾಮದಲ್ಲಿ ಜರುಗಿದೆ.
ಈ ಬಗ್ಗೆ ಈಶ್ವರ್ ಖಂಡ್ರೆ ಮಾತನಾಡಿ, ಸಂರಕ್ಷಿತ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೂದುತೋಳದ ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ ಎಂದರು.
ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟರ್ ಬಂಕಾಪುರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದೆ. ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ ಸಂತತಿಯಲ್ಲಿ ಹೆಚ್ಚಳಕ್ಕೂ ಇದೆ ಕಾರಣವಾಗಿದೆ ಎಂದರು.
ಕಳೆದ ತಿಂಗಳು ಇದೇ ಕುರುಚಲು ಕಾಡಿನಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿತ್ತು. ಈಗ ಮತ್ತೊಂದು ತೋಳ ಐದು ಮರಿಗೆ ಜನ್ಮಕೊಟ್ಟಿದೆ. ನೈಸರ್ಗಿಕ ಗುಹೆಗಳು, ಬೆಟ್ಟ ಗುಡ್ಡಗಳನ್ನೂ ಹೊಂದಿರುವ ಈ ಧಾಮದಲ್ಲಿ, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿ ಮೊದಲಾದ ಹಲವು ವನ್ಯಜೀವಿಗಳಿವೆ. ಕಳ್ಳಬೇಟೆ ತಡೆಗೂ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಮಾಹಿತಿ ನೀಡಿದರು.