ತುಮಕೂರು: ಕ್ರೂಸರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ತುಮಕೂರು ತಾಲೂಕಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಗಂಗಾವತಿ ಮೂಲದ ಶಂಕರ್(35), ಸತೀಶ್(40) ಮೃತರು. ಅಪಘಾತದಲ್ಲಿ ಮತ್ತೋರ್ವನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕರಿಗೆ ಕಮಿಷನ್ ಹಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಕೋರ ಸಮೀಪ ಕ್ರೂಸರ್ ಕಾರಿನ ಹಿಂಬದಿಯ ಟೈಯರ್ ಪಂಚ್ಚರ್ ಆಗಿತ್ತು. ಹೀಗಾಗಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಟೈಯರ್ ಬದಲಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣನಾದ ಲಾರಿ ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.