ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಲಾಭ ಎಲ್ಲಾ ಫಲಾನುಭವಿಗಳಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಅವರು, ನಾಡಿನ ಮಹಿಳೆಯರ ಆರ್ಥಿಕ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಾ, ಜನಪರ ಆಡಳಿತದ ಮೂಲಕ ನುಡಿದಂತೆ ನಡೆಯುತ್ತಿರುವ ನಮ್ಮ ಕಾಂಗ್ರೆಸ್ (Congress) ಸರ್ಕಾರವು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಮತ್ತಷ್ಟು ಜನರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ 5,000ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಏಕಕಾಲದಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೇಟ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ಈ ಅಭಿಯಾನದ ಸಂಪೂರ್ಣ ಪ್ರಯೋಜನ ಪಡೆಯಬೇಕೆಂದು ಮನವಿ ಮಾಡಿದರು.