ತುಮಕೂರು: ಶಾಲೆಯ ಪಕ್ಕದಲ್ಲಿದ್ದ ದೇವಸ್ಥಾನದಲ್ಲಿ ದೀಪ ಹಚ್ಚಲು ಹೋಗಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮೇಳಕೋಟೆ ಗ್ರಾಮದಲ್ಲಿ ನಡೆದಿದೆ. ಮೇಳಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯ ಓದುತ್ತಿದ್ದ ದೀಕ್ಷಾ ಮೃತ ವಿದ್ಯಾರ್ಥಿನಿಯಾಗಿದ್ದು, ಮಾ.13ರಂದು ಶಾಲೆಯಲ್ಲಿ ಊಟಕ್ಕೆ ಬಿಟ್ಟ ಸಮಯದಲ್ಲಿ ನಡೆದಿರುವ ದುರ್ಘಟನೆಯಾಗಿದೆ.
ಶಾಲೆಯಲ್ಲಿ ಮಧ್ಯಾಹ್ನದ ಊಟದ ವಿರಾಮದ ವೇಳೆ ಆಕೆ ಶಾಲೆಯ ಪಕ್ಕದಲ್ಲೇ ಇರುವ ದೇವಾಲಯದಲ್ಲಿ ದೀಪ ಹಚ್ಚಲು ಹೋಗಿದ್ದಳು. ದೇವರಿಗೆ ದೀಪ ಹಚ್ಚಿದ ಆಕೆಯ ಬಟ್ಟೆಗೆ ಬೆಂಕಿ ಹತ್ತಿಕೊಂಡಿತ್ತು. ಬೆಂಕಿ ಬಟ್ಟೆಗೆ ತಗುಲಿ ಮೈಗೆ ಸುಟ್ಟ ಗಾಯಗಳಾಗಿತ್ತು. ಆಕೆಯನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ಆಸ್ಪತ್ರೆಗೂ ದಾಖಲಿಸಲಾಗಿತ್ತು. ಇದೀಗ ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.