ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ನಡೆದಿದೆ.
ನಿತ್ಯಾ (19) ಹೇಮಾವತಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಯುವತಿ.
ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್ ಎಂಬುವವರ ಪುತ್ರಿ ನಿತ್ಯಾ, ಹನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ತಮ್ಮ ಸಂಬಂಧಿಕರೊಂದಿಗೆ ಅರಳಿಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು.
ಪೂಜೆ ಸಲ್ಲಿಸಿ, ಪ್ರಸಾದ ಸೇವಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ನಿತ್ಯಾ ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲೇ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕದಳ ಭೇಟಿ ನೀಡಿದ್ದು,ನಿತ್ಯಾ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.