ಬೆಳಗಾವಿ:- ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಜಾಗೃತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್ ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಡಿಜಿಟಲ್ ಫ್ರಾಡ್ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ.ಗೂ ಹೆಚ್ಚು ಮೊತ್ತದ ವಂಚನೆ ಆಗಿದೆ. ಅದರಲ್ಲಿ 9.45 ಕೋಟಿ ರೂ.ಗಳನ್ನು ವಶಪಡಿಸಿಕೊಂಡು 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟೆಲಿಗ್ರಾಂ ಇತರೆ ಅಂತರ್ಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸಾಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಶಾಲಾ ಕಾಲೇಜುಗಳಿಗೆ ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಡಿಜಿಟಲ್ ಅರೆಸ್ಟ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಾ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.