ಅಫ್ಘಾನಿಸ್ತಾನ್ ತಂಡವು ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಕಿಂಗ್ಸ್ಟೌನ್ನ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ್ ತಂಡಕ್ಕೆ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಭರ್ಜರಿ ಆರಂಭ ಒದಗಿಸಿದ್ದರು.
ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ.. ರೆಡ್ ಅಲರ್ಟ್!
ಮೊದಲ ವಿಕೆಟ್ಗೆ 118 ರನ್ ಪೇರಿಸಿದ ಈ ಜೋಡಿ ಅಫ್ಘಾನ್ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿದ್ದರು. ಇದರ ನಡುವೆ 49 ಎಸೆತಗಳಲ್ಲಿ 60 ರನ್ ಬಾರಿಸಿ ರಹಮಾನುಲ್ಲಾ ಗುರ್ಬಾಝ್ ಔಟಾದರೆ, ಇದರ ಬೆನ್ನಲ್ಲೇ 51 ರನ್ ಬಾರಿಸಿದ್ದ ಇಬ್ರಾಹಿಂ ಝದ್ರಾನ್ ವಿಕೆಟ್ ಒಪ್ಪಿಸಿದರು.
ಆರಂಭಿಕರಿಬ್ಬರ ಪತನದೊಂದಿಗೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಆಸ್ಟ್ರೇಲಿಯಾ ಬೌಲರ್ಗಳು ಅಫ್ಘಾನಿಸ್ತಾನ್ ತಂಡದ ರನ್ ಗತಿಯನ್ನು ನಿಯಂತ್ರಿಸಿದರು. ಇದರ ನಡುವೆ ಒತ್ತಡಕ್ಕೆ ಒಳಗಾದ ಅಫ್ಘಾನಿಸ್ತಾನ್ ಬ್ಯಾಟರ್ಗಳು ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು ಅಫ್ಘಾನಿಸ್ತಾನ್ 148 ರನ್ ಕಲೆಹಾಕಿತು.
149 ರನ್ಗಳ ಸುಲಭ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ನವೀನ್ ಉಲ್ ಹಕ್ ಮೊದಲ ಓವರ್ನಲ್ಲೇ ಆಘಾತ ನೀಡಿದ್ದರು. ಟ್ರಾವಿಸ್ ಹೆಡ್ (0) ರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ನವೀನ್ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಮಿಚೆಲ್ ಮಾರ್ಷ್ (12) ಕೂಡ ವಿಕೆಟ್ ಒಪ್ಪಿಸಿದರು. ಇನ್ನು ಡೇಂಜರಸ್ ಡೇವಿಡ್ ವಾರ್ನರ್ (3) ವಿಕೆಟ್ ಪಡೆಯುವಲ್ಲಿ ಮೊಹಮ್ಮದ್ ನಬಿ ಯಶಸ್ವಿಯಾದರು. ಈ ಹಂತದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅಫ್ಘಾನ್ ಬೌಲರ್ಗಳನ್ನು ಮನಸ್ಸೋ ಇಚ್ಛೆ ದಂಡಿಸಿದ ಮ್ಯಾಕ್ಸ್ವೆಲ್ 41 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 59 ರನ್ ಬಾರಿಸಿದರು. ಈ ಹಂತದಲ್ಲಿ ನೂರ್ ಅಹ್ಮದ್ ಹಿಡಿದ ಅದ್ಭುತ ಕ್ಯಾಚ್ನಿಂದಾಗಿ ಮ್ಯಾಕ್ಸ್ವೆಲ್ ಹೊರ ನಡೆಯಬೇಕಾಯಿತು.
ಅಂತಿಮ ಓವರ್ನ 2ನೇ ಎಸೆತದಲ್ಲಿ ಆ್ಯಡಂ ಝಂಪಾ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡುವ ಮೂಲಕ ಆಸ್ಟ್ರೇಲಿಯಾ ತಂಡ 19.2 ಓವರ್ಗಳಲ್ಲಿ 127 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡ 21 ರನ್ಗಳ ಐತಿಹಾಸಿಕ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.