ಮಂಡ್ಯ :- ಮದ್ದೂರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಿದ್ದು, ಶೀಘ್ರದಲ್ಲೇ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ದೊರೆಯಲಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ಮದ್ದೂರು ವಿಧಾನಸಭಾ ಕ್ಷೇತ್ರದ ಹನುಮಂತಪುರ, ಅಡಗನಹಳ್ಳಿ, ಮಾಲಗಾರನಹಳ್ಳಿ, ಸಾದೊಳಲು ಗ್ರಾಮಗಳಲ್ಲಿ 3 ಕೋಟಿ ರೂ.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಸೋಮವಾರ ಮಾತನಾಡಿದರು.
ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ. ರಸ್ತೆ, ಚರಂಡಿ, ಕುಡಿಯುವ ನೀರು, ಸಾರಿಗೆ, ಇಂಧನ, ಶಿಕ್ಷಣ ಸೇರಿದಂತೆ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಬೇಕಿದೆ, ಆದಷ್ಟು ಬೇಗ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳು ಮದ್ದೂರಿಗೆ ಬಂದಾಗ ಸ್ವಾಗತ ಮಾಡುವುದು ನಮ್ಮ ಕರ್ತವ್ಯ. ಹಾಗಾಗಿ ನಮ್ಮ ಮನೆಗೆ ಬಂದು ಆತಿಥ್ಯ ಸ್ವೀಕರಿಸಿದ್ದಾರೆ. ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಕೇಳಿದ್ದೇನೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅನುದಾನ ನೀಡುವ ಭರವಸೆ ನೀಡಿದ್ದು, ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಗೆ ತುಳ ಮಟ್ಟದಿಂದ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ಮತ್ತು ಮಾರ್ಗದರ್ಶನ ಮಾಡಿದ್ದಾರೆ ಎಂದರು.
ಕ್ಷೇತ್ರದ ಕೆಲ ಭಾಗಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಚಿರತೆಗಳ ಹಾವಳಿಯನ್ನು ತಡೆಗಟ್ಟಲು ಈಗಾಗಲೇ ಸಂಬಂಧಿಸಿದ ಸಚಿವರಿಗೆ ಪತ್ರ ವ್ಯವಹಾರ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಚಿರತೆ ಸೆರೆಗೆ ಬೇಕಾದ ಬೋನುಗಳನ್ನು ಅಳವಡಿಸಿಕೊಂಡು ಸೆರೆ ಹಿಡಿದು ಕಾಡಿಗೆ ಬಿಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಿರಣ್, ಮುಖಂಡರಾದ ದೀಪು, ಕೃಷ್ಣ, ರವಿ, ಪ್ರಸನ್ನ, ರಾಮಲಿಂಗಯ್ಯ, ಯರಗನಹಳ್ಳಿ ಹರೀಶ್, ಶಿವಕುಮಾರ್, ಎಂಜಿನಿಯರ್ ಪ್ರಶಾಂತ್ ಸೇರಿದಂತೆ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ