ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ವಿರುದ್ಧ ವಾಗ್ದಾಳಿ ಮುಂದುರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರಿಗೆ ಇದ್ದದ್ದನ್ನು ಇದ್ದ ಹಾಗೆ ಹೇಳಿದರೆ ಸಿಟ್ಟು ಎಂದು ವ್ಯಂಗ್ಯವಾಡಿದ್ದಾರೆ. ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ವೇಳೆ ದೇವೇಗೌಡರ ವಿರುದ್ಧ ಹರಿಹಾಯ್ದ ಅವರು,
ಮೋದಿಯವರು ಮತ್ತೆ ಪ್ರಧಾನಿಯಾದರೆ ಭಾರತ ತೊರೆಯುವುದಾಗಿ ಹೇಳಿದ್ದ ದೇವೇಗೌಡರು ಈಗ ಮೋದಿಯವರ ಜತೆಗೇ ಸೇರಿದ್ದಾರೆ. ಮುಸಲ್ಮಾನರನ್ನು ಓಲೈಸುವ ಸಲುವಾಗಿ ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುವುದಾಗಿ ಹೇಳಿದರು. ಇದ್ದದ್ದು ಇದ್ದಂಗೆ ಹೇಳಿದರೆ ದೇವೇಗೌಡರಿಗೆ ಸಿಟ್ಟು ಎಂದರು.
ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ಹೇಳಿದ ಯಾವುದನ್ನೂ ಜಾರಿ ಮಾಡಲೇ ಇಲ್ಲ. ಕಪ್ಪು ಹಣ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ ಕಾಳು ಯಾವುದರ ಬೆಲೆಯನ್ನೂ ಇಳಿಸಲಿಲ್ಲ. ಬರೀ ಬಾಯಲ್ಲಿ ಅಚ್ಛೇ ದಿನ್ ಆಯೆಗಾ ಎಂದು ಭಾಷಣ ಭಾರಿಸಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ ಎಂದರು.
ಕೇಂದ್ರ ಸರ್ಕಾರದ ಬೆಲೆ ಏರಿಕೆಗಳಿಂದ ಹೈರಾಣಾಗಿದ್ದ ನಮ್ಮ ನಾಡಿನ ಜನತೆಯ ಕಷ್ಟಕ್ಕೆ ಸ್ಪಂದಿಸುವ ಉದ್ದೇಶದಿಂದಲೇ ಐದು ಗ್ಯಾರಂಟಿಗಳ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 5-6 ಸಾವಿರ ಉಳಿತಾಯ ಆಗುವ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಭದ್ರ ಆಗಿರುವವರೆಗೂ ಈ ಅನುಕೂಲ ಪ್ರತಿ ತಿಂಗಳೂ ಜನರ ಮನೆ ಬಾಗಿಲಿಗೆ ಬರುತ್ತಲೇ ಇರುತ್ತದೆ ಎಂದರು.