ಬೆಳಗಾವಿ:- ಬಿಜೆಪಿ ಅವರಿಗೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು,ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ ಪರಿಹಾರಕ್ಕೆ ಹಣ ನೀಡದ ಕೇಂದ್ರ ಸರ್ಕಾರದ ವೈಫಲ್ಯ ಮುಚ್ಚಿಹಾಕಿ, ಜನರ ಗಮನ ಬೇರೆ ಕಡೆ ಸೆಳೆಯುವ ದುರುದ್ದೇಶದಿಂದ ರಾಜ್ಯದ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ ಕಲಾಪಕ್ಕೆ ತಡೆಯೊಡ್ಡುತ್ತಿದ್ದಾರೆ.
ಇವರಿಗೆ ರಾಜ್ಯದ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ, ಜನತೆ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರಿಗೆ ಛೀಮಾರಿ ಹಾಕುತ್ತಿರುವುದಕ್ಕೆ ಚುನಾಯಿತ ಪ್ರತಿನಿಧಿಗಳ ಇಂತಹ ಬೇಜವಾಬ್ದಾರಿ ನಡವಳಿಕೆಗಳೇ ಕಾರಣ ಎಂದರು.
ಜನರ ತೆರಿಗೆ ಹಣದಿಂದ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿ ವರ್ಷಕ್ಕೊಂದು ಬಾರಿ ವಿಧಾನಮಂಡಲದ ಅಧಿವೇಶನ ನಡೆಸುತ್ತಿರುವುದೇ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವುದಕ್ಕಾಗಿ. ಇಂತಹ ಚರ್ಚೆಗೆ ಅವಕಾಶವನ್ನೇ ಕೊಡದೇ ಇರುವ ರಾಜ್ಯದ ಬಿಜೆಪಿ ಶಾಸಕರು, ತಾವು ಉತ್ತರ ಕರ್ನಾಟಕದ ವಿರೋಧಿಗಳು ಎನ್ನುವುದನ್ನು ಸಾಬೀತು ಪಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.