ಚಿತ್ರದುರ್ಗ : ಶ್ರೀರಾಮುಲು ಅವರಿಗೆ ಪೈಪೋಟಿ ಕೊಡುವಷ್ಟು ದೊಡ್ಡ ಮನುಷ್ಯ ನಾನಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೆಂದ್ರ ಹೇಳಿದ್ದಾರೆ. ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜಿ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ರಾಜ್ಯಾಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದು, ಕಾರ್ಯಕರ್ತರ ಸಹಕಾರದಿಂದ ಯಶಸ್ವಿಯಾಗಿ ಕೆಲಸ ಮಾಡ್ತಿದ್ದೇನೆ. ನಾನು ರಾಜ್ಯಾಧ್ಯಕ್ಷನಾಗಿ ಮುಂದುವರೆಯಬೇಕೆಂದು ಕಾರ್ಯಕರ್ತರ ಅಪೇಕ್ಷೆಯಾಗಿದ್ದು, ಸದ್ಯದಲ್ಲೇ ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.
ಇನ್ನೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶ್ರೀರಾಮುಲು ಪೈಪೋಟಿ ವಿಚಾರವಾಗಿ ಪ್ರತಿಕ್ರಿಯಿಸಿ, ಶ್ರೀರಾಮುಲುರವರಿಗೆ ಪೈಪೋಟಿ ಕೊಡುವಷ್ಟು ದೊಡ್ಡ ಮನುಷ್ಯ ನಾನಲ್ಲ. ಶ್ರೀರಾಮುಲು, ಕಾರಜೋಳ, ಯಡಯೂರಪ್ಪ, ಅನಂತಕುಮಾರ ಹಿರಿಯರಿದ್ದಾರೆ. ಅನೇಕ ಹಿರಿಯರ ಜೊತೆ ಶ್ರೀರಾಮುಲು ಪಕ್ಷ ಸಂಘಟನೆ ಮಾಡಿದ್ದಾರೆ. ಆದರೆ ಏನೇ ಇದ್ದರೂ ಅಂತಿಮವಾಗಿ ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ. ಹಲವು ಅಂಶಗಳನ್ನು ಆಧಾರವಾಗಿಟ್ಟು ಪಕ್ಷ ತೀರ್ಮಾನ ಮಾಡುತ್ತದೆ. ಅದಕ್ಕೆ ಎಲ್ಲರೂ ಬದ್ಧರಾಗಿರಬೇಕಾಗುತ್ತದೆ ಎಂದರು.
ಇದೇ ವೇಳೆ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ವಿಜಯೇಂದ್ರ ಬೆಂಬಲಿಗರಿಗೆ ಅವಕಾಶ ವಿಚಾರಕ್ಕೆ ಪ್ರತಿಕ್ರಿಯಿಸಿ, ಚುನಾವಣಾ ಪ್ರಕ್ರಿಯೆ ಇದೆ, ಅದರ ಪ್ರಕಾರ ಆಗಿದೆ. ರಾಜ್ಯಾಧ್ಯಕ್ಷನಾಗಿ ನನ್ನ ಅಭಿಪ್ರಾಯ ಕೊಟ್ಟಿಲ್ಲ ಎನ್ನುತ್ತಲೇ ಹೆಚ್ಚೇನು ಹೇಳದೇ ಮುನ್ನಡೆದರು.