ಬೆಂಗಳೂರು:- ಶಿಗ್ಗಾಂವಿ ಮತ್ತು ಸಂಡೂರಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿ ಮತ್ತು ಸಂಡೂರು ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ.
ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಆ ಮೂಲಕ ಕೊನೆಗೂ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಬಸವರಾಜ ಬೊಮ್ಮಾಯಿ ಸಫಲರಾಗಿದ್ದಾರೆ. ಹಾವೇರಿ ಕ್ಷೇತ್ರದ ಸಂಸದರಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದರು. ಸಂಸದರಾಗಿ ಆಯ್ಕೆ ಹಿನ್ನೆಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿದ್ದ ಶಿಗ್ಗಾಂವಿ ಕ್ಷೇತ್ರಕ್ಕೆ ಅವರ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದ್ದು, ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.
ನವೆಂಬರ್ 13ರಂದು ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಂಗಾರು ಹನುಮಂತುಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಸಂಸದರಾಗಿ ಇ.ತುಕಾರಾಮ್ ಆಯ್ಕೆಯಾಗಿದ್ದರು. ಶಾಸಕ ಸ್ಥಾನಕ್ಕೆ ತುಕಾರಾಮ್ ರಾಜೀನಾಮೆ ನೀಡಿದ್ದರು. ಹೀಗಾಗಿ ಸಂಡೂರು ಕ್ಷೇತ್ರ ತೆರವಾಗಿತ್ತು.