ಬೆಂಗಳೂರು:- ಇಂದು ಕರ್ನಾಟಕದ 3 ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದ್ದು, ಚುನಾವಣಾ ಅಭ್ಯರ್ಥಿಗಳ ಭವಿಷ್ಯ ಇಂದು ಮತಯಂತ್ರ ಸೇರಲಿದೆ.
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇವತ್ತು ಉಪಚುನಾವಣೆ ಮತದಾನ ನಡೆಯಲಿದೆ. ಮತದಾರ ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾನೆ. ಈ ಪೈಕಿ ಚನ್ನಪಟ್ಟಣ ಕ್ಷೇತ್ರ ವಿವಿಧ ಕಾರಣಗಳಿಂದ ಹೆಚ್ಚು ಸದ್ದು ಮಾಡಿದೆ.
ಮೊದಲಿಗೆ ಚನ್ನಪಟ್ಟಣ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿದೆ. ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳಾದ ಬಿಜೆಪಿ-ಜೆಡಿಎಸ್ಗೆ ಚನ್ನಪಟ್ಟಣ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ನಿಂದ ಸಿಪಿ ಯೋಗೇಶ್ವರ್ ಹಾಗೂ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಚನ್ನಪಟ್ಟಣದಲ್ಲಿ ಒಟ್ಟು 2,32,949 ಮತದಾರರಿದ್ದು, ಈ ಪೈಕಿ 1,12,324 ಪುರುಷ ಮತದಾರರು, 1,20,617 ಮಹಿಳಾ ಮತದಾರರಿದ್ದಾರೆ. 8,338 ಯುವ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 276 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗಿದೆ. ನಗರ ಪ್ರದೇಶದಲ್ಲಿ 62, ಗ್ರಾಮೀಣ ಪ್ರದೇಶದಲ್ಲಿ 214 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ. 119 ಮತಗಟ್ಟೆಗಳನ್ನ ಸೂಕ್ಷ್ಮ ಮತಗಟ್ಟೆಗಳು ಎಂದು ನಿರ್ಧರಿಸಲಾಗಿದೆ. 8 ವಿಶೇಷ ಮತಗಟ್ಟೆ, 5 ಸಖಿ ಮತಗಟ್ಟೆ, ವಿಶೇಷ ಚೇತನರಿಗಾಗಿ 1 ಮತಗಟ್ಟೆ, 1 ಯುವ ಮತಗಟ್ಟೆ, 1 ಸಾಂಪ್ರದಾಯಿಕ ಮತಗಟ್ಟೆ ತೆರೆಯಲಾಗಿದೆ
ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣದಲ್ಲಿದರೆ, ಕಾಂಗ್ರೆಸ್ನಿಂದ ಯಾಸೀರ್ ಖಾನ್ ಪಠಾಣ್ ಸೇರಿ ಅಂತಿಮ ಕಣದಲ್ಲಿರುವ 8 ಅಭ್ಯರ್ಥಿಗಳಿದ್ದಾರೆ. ಇಲ್ಲೂ ಎರಡು ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಅನ್ನಪೂರ್ಣ ತುಕಾರಾಂ ಹಾಗೂ ಬಿಜೆಪಿಯ ಬಂಗಾರು ಹನುಮಂತು ನಡುವೆ ನೇರಾ ಹಣಾಹಣಿ ನಡೆದಿದೆ. ಒಟ್ಟಾರೆ 7 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.
ಸಂಡೂರಿನಲ್ಲಿ ಒಟ್ಟು 2,36,100 ಮತದಾರರಿದ್ದು, ಈ ಪೈಕಿ 1,18,282 ಮಹಿಳಾ ಮತದಾರರು, 1,17,789 ಪುರುಷ ಮತದಾರರಿದ್ದಾರೆ. ಒಟ್ಟು 253 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ.