ಬೆಂಗಳೂರು:- ಶಾಸಕ ಹರೀಶ್‌ ಪೂಂಜಾ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಷಣದ ಸಿಡಿ ಒದಗಿಸಲು ಹೈಕೋರ್ಟ್ ಸೂಚನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಮತ್ತು ಕೋಮು ಭಾವನೆ ಕೆರಳಿಸುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾದ ಕ್ರಿಮಿನಲ್‌ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಲ್ಲೇಖಿಸಿರುವ ಹೇಳಿಕೆಯ ವಿಡಿಯೊದ ಸಿಡಿಯನ್ನು ಒದಗಿಸಿ’ ಎಂದು ಪ್ರಕರಣದ‌ ಫಿರ್ಯಾದುದಾರರಿಗೆ ಹೈಕೋರ್ಟ್ ಸೂಚಿಸಿದೆ.

ಬೆಳ್ತಂಗಡಿ ಠಾಣಾ ಪೊಲೀಸರು ನನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಹರೀಶ್ ಪೂಂಜಾ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಇದೇ ವೇಳೆ ಫಿರ್ಯಾದುದಾರರ ಪರ ವಕೀಲ ಬಿ.ಲತೀಫ್‌, ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಸಮಯಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 8ಕ್ಕೆ ಮುಂದೂಡಿದೆ ಎನ್ನಲಾಗಿದೆ.

Share.