ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ಸಿಎಂ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿಂದು ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ (KDP Meeting) ನಡೆಸಿದರು. ಸಚಿವರಾದ ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಡಾ.ಶರಣ ಪ್ರಕಾಶ ಪಾಟೀಲ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸೂಚನೆ ನೀಡಲಾಯಿತು.
ಈ ವೇಳೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು. 371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು
ಅಲ್ಲದೇ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು. ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್ಸಿ ಕೇವಲ ಗ್ರೂಪ್ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್ ಸಿ ಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮೂಲಕ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ. ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಾಕೀತು ಮಾಡಿದರು