ಬೆಂಗಳೂರು:- ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಒಪ್ಪಿಕೊಂಡಿದ್ದಕ್ಕೆ ಅಭಿನಂದನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ ಎಂದರು.
ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆ ಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಷಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಆಗುತ್ತದೆಯೇ? ಎಂದು ಮರು ಪ್ರಶ್ನಿಸಿದರು.
ಕುಮಾರಸ್ವಾಮಿ ಅವರು ಈ ರೀತಿಯ ಕೆಲಸ ಮಾಡಿರುವುದು ತಪ್ಪಲ್ಲವೇ ಎಂದು ಕೇಳಿದಾಗ, “ವಿದ್ಯುತ್ ಕಳ್ಳತನ ಮಾಡಬಾರದು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂತಹವರೇ ಹೀಗೆ ಕಳವು ಮಾಡಿದರೆ ತಪ್ಪಲ್ಲವೇ? ಸಂಬಂಧಿಸಿದ ಇಲಾಖೆಯವರು ಏನು ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ. ಈ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ, ನಮಗೆ ಅದರ ಅವಶ್ಯಕತೆಯೂ ಇಲ್ಲ ಮತ್ತು ಸಮಯವೂ ಇಲ್ಲ. ಬೆಸ್ಕಾಂನವರು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು. ಕುಮಾರಸ್ವಾಮಿ ಅವರು ಸತ್ಯವನ್ನು ಒಪ್ಪಿಕೊಂಡಿರುವುದಕ್ಕೆ ಶುಭವಾಗಲಿ, ಸತ್ಯಮೇವ ಜಯತೇ ಎನ್ನುವ ಮಾತಿನಂತೆ ಸತ್ಯವನ್ನ ಎತ್ತಿ ಹಿಡಿದಿರುವುದಕ್ಕೆ ಸಂತೋಷ ಎಂದು ಹೇಳಿದರು.