ಜೈಪುರ:- ಕಾಂಗ್ರೆಸ್ನ ಓಲೈಕೆ ರಾಜಕಾರಣಕ್ಕೆ ಸೋಲಾಗಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜಸ್ಥಾನದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಓಲೈಕೆ ರಾಜಕಾರಣದಲ್ಲಿ ತೊಡಗಿದೆ, ಜನರು ಬೇಸತ್ತಿದ್ದಾರೆ. ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮಹಿಳೆಯರು, ದಲಿತರು ಸೇರಿ ಯಾರಾದರೂ ಕಷ್ಟದಲ್ಲಿದ್ದಾರೆ ಎಂದರೆ ಅದಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ನೇತೃತ್ವದ ಸರ್ಕಾರದ ಓಲೈಕೆ ನೀತಿಯೇ ಕಾರಣ. ಮತಬ್ಯಾಂಕ್ ರಾಜಕಾರಣಕ್ಕಾಗಿ ಗಲಭೆಕೋರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಅಮಿತ್ ಶಾ ಆರೋಪಿಸಿದರು.
ರಾಮಮಂದಿರ ನಿರ್ಮಾಣ, ತ್ರಿವಳಿ ತಲಾಖ್ ರದ್ದತಿ, ಸಂವಿಧಾನದ ವಿಧಿ 370ರ ಅಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ ಹಿಂಪಡೆದಿದ್ದನ್ನು ಉಲ್ಲೇಖಿಸಿ ಮಾತನಾಡಿದ ಅವರು, ಕಠಿಣ ನಿರ್ಣಯಗಳನ್ನು ಕಾರ್ಯರೂಪಕ್ಕೆ ತಂದಿರುವ ದಾಖಲೆ ಬಿಜೆಪಿಯದ್ದಾಗಿದೆ ಎಂದರು.
‘ಪಿ.ಎಂ ಎಂದರೆ ಪನೌತಿ ಮೋದಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಪ್ರಧಾನಿ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಲಾಗಿದೆ. ಇದಕ್ಕೆ ಜನರು ಮತದಾನದ ವೇಳೆ ಉತ್ತರಿಸಲಿದ್ದಾರೆ’ ಎಂದರು.