ನುಗ್ಗೇಹಳ್ಳಿ:- ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ಸರ್ಕಾರ ಮುಳುಗಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡದೇ, ಕೇವಲ ಅಧಿಕಾರಿಗಳ ವರ್ಗಾವಣೆಯಲ್ಲಿ ಮುಳುಗಿದ್ದು, ಈ ಸರ್ಕಾರದಿಂದ ರಾಜ್ಯದ ಜನ ಏನನ್ನು ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದರು.
5 ಗ್ಯಾರಂಟಿ ಯೋಜನೆಗಳ ನೆಪ ಮಾಡಿ ಅಭಿವೃದ್ಧಿಗೆ ಆದ್ಯತೆ ನೀಡುತ್ತಿಲ್ಲ. ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಕೊಬ್ಬರಿಗೆ ಪ್ರತಿ ಕ್ವಿಂಟಲ್ಗೆ ₹15 ಸಾವಿರ ನೀಡುವುದಾಗಿ ಹೇಳಿತ್ತು. ನಾವು ಕೂಡ ನಮ್ಮ ಪ್ರಣಾಳಿಕೆಯಲ್ಲಿ ₹ 15 ಸಾವಿರ ಕೊಡುವುದಾಗಿ ಘೋಷಣೆ ಮಾಡಿದ್ದೇವು. ಆದರೆ ನಮ್ಮ ಪಕ್ಷಕ್ಕೆ ಬಹುಮತ ಬರಲಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಈ ಬಗ್ಗೆ ಅಧಿವೇಶನದಲ್ಲಿ ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಪ್ರತಿಭಟಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರ ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.